ಸುದ್ದಿ ಕಣಜ.ಕಾಂ
ಶಿವಮೊಗ್ಗ: ರಾಜ್ಯದ ಎಲ್ಲ ಸರ್ಕಾರಿ ಶಾಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವನ್ನು ಅಳವಡಿಸಿದ ಸ್ಮಾರ್ಟ್ ಕ್ಲಾಸ್ ಆರಂಭಿಸಲು ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ ಎಂದು ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.
ನಗರದ ಪಾರ್ಕ್ ಬಡಾವಣೆಯ ಸರ್ಕಾರಿ ಆಂಗ್ಲ ಮತ್ತು ಕನ್ನಡ ಮಾದರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ ಸ್ಮಾರ್ಟ್ ತರಗತಿಗಳನ್ನು ವೀಕ್ಷಿಸಿ ಮಾತನಾಡಿದರು.
ಈ ಶಾಲೆಗಳಲ್ಲಿ ವ್ಯಾಸಾಂಗ ಮಾಡುವ ಯಾವುದೆ ವಿದ್ಯಾರ್ಥಿಗಳು ಕೀಳರಿಮೆ ಇಲ್ಲದೆ ಶೈಕ್ಷಣಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು. ನಗರದ ಸರ್ಕಾರಿ ಶಾಲೆಗಳ ಅಭಿವೃದ್ಧಿ ಕಾರ್ಯದಲ್ಲಿ ಸ್ಥಳೀಯ ಖಾಸಗಿ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಸಹಾಯ ಹಸ್ತ ನೀಡಿದ್ದಾರೆ.
– ಕೆ.ಎಸ್.ಈಶ್ವರಪ್ಪ, ಸಚಿವರು
ಸರ್ಕಾರಿ ಶಾಲೆಗಳು ಯಾವುದೇ ಖಾಸಗಿ ಶಾಲೆಗಳಿಗೆ ಕಡಿಮೆಯಿಲ್ಲದಂತೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲು ಕ್ರಮ ಕೈಗೊಳ್ಳಲಾಗಿದೆ. ಇದಕ್ಕೆ ಸಂಬಂಧಪಟ್ಟಂತೆ ಮುಂದಿನ ಬಜೆಟ್ನಲ್ಲಿ ಅನುದಾನವನ್ನು ಕಾಯ್ದಿರಿಸಿ ರಾಜ್ಯದ ಎಲ್ಲ ಸರ್ಕಾರಿ ಶಾಲೆಗಳಲ್ಲಿ ಸ್ಮಾರ್ಟ್ ಕ್ಲಾಸ್ ಗಳನ್ನು ಆರಂಭಿಸಲಾಗುವುದು ಎಂದು ಭರವಸೆ ನೀಡಿದರು.