ಸುದ್ದಿ ಕಣಜ.ಕಾಂ
ಶಿವಮೊಗ್ಗ: ಸಂಚಾರ ದಟ್ಟಣೆ ತಗ್ಗಿಸುವ ಉದ್ದೇಶದಿಂದ ಶಿವಮೊಗ್ಗ ನಗರ ಮತ್ತು ಭದ್ರಾವತಿಯಲ್ಲಿ ರೈಲ್ವೆ ಮೇಲ್ಸೇತುವೆ ಮತ್ತು ಕೆಳಸೇತುವೆಗಳ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಈಗಾಗಲೇ ಅನುದಾನ ಬಿಡುಗಡೆಗೊಳಿಸಿದೆ. ಆದಷ್ಟು ಬೇಗ ಕಾಮಗಾರಿ ಆರಂಭಿಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಇದನ್ನೂ ಓದಿ । ಬಂಪರ್ ಬಹುಮಾನಕ್ಕೆ ಮುಗಿಬಿದ್ದ 400 ತಂಡ, ತಲೆಕೆಟ್ಟು ಕ್ರಿಕೆಟ್ ಪಂದ್ಯಾವಳಿಯೇ ರದ್ದು!
ನಾಲ್ಕು ಮೇಲ್ಸೇತುವೆ ನಿರ್ಮಾಣಕ್ಕೆ ಗ್ರೀನ್ ಸಿಗ್ನಲ್ | ಶಿವಮೊಗ್ಗ ನಗರದ ಸವಳಂಗ ರಸ್ತೆ ಮತ್ತು ಕಾಶಿಪುರ ಹಾಗೂ ಭದ್ರಾವತಿಯಲ್ಲಿ ಒಟ್ಟು 4 ರೈಲ್ವೆ ಸೇತುವೆಗಳ ನಿರ್ಮಾಣಕ್ಕೆ ಅನುಮೋದನೆ ದೊರೆತಿದೆ. ಸವಳಂಗ ರಸ್ತೆಯಲ್ಲಿ ರೈಲ್ವೆ ಮೇಲ್ಸೇತುವೆ ಮತ್ತು ಕೆಳಸೇತುವೆ ನಿರ್ಮಾಣಕ್ಕೆ ಸರ್ಕಾರ 60.76 ಕೋಟಿ ರೂಪಾಯಿ ಬಿಡುಗಡೆ ಮಾಡಿದೆ. ಇಲ್ಲಿ ಭೂಸ್ವಾಧೀನ ಪ್ರಕ್ರಿಯೆ, ವಿದ್ಯುತ್ ಕಂಬಗಳ ಸ್ಥಳಾಂತರ ಇತ್ಯಾದಿ ಕಾರ್ಯಗಳನ್ನು ಆದಷ್ಟು ಬೇಗನೆ ಪೂರ್ಣಗೊಳಿಸಬೇಕು.
ಕಾಶಿಪುರ ರೈಲ್ವೆ ಕ್ರಾಸಿಂಗ್ ಬಳಿ ಮೇಲ್ಸೇತುವೆ ನಿರ್ಮಾಣಕ್ಕೆ 30 ಕೋಟಿ ರೂಪಾಯಿ ಹಾಗೂ ಭದ್ರಾವತಿಯಲ್ಲಿ ಮೇಲ್ಸೇತುವೆ ನಿರ್ಮಾಣಕ್ಕೆ 49 ಕೋಟಿ ರೂಪಾಯಿ ಬಿಡುಗಡೆಯಾಗಿದೆ ಎಂದರು.
- ರೈಲ್ವೆ ಕೋಚಿಂಗ್ ಡಿಪೋ ನಿರ್ಮಾಣಕ್ಕೆ ಕೇಂದ್ರ ಸರ್ಕಾರದಿಂದ 60 ಕೋಟಿ ರೂಪಾಯಿ ಬಿಡುಗಡೆಗೆ ಅನುಮೋದನೆ
- ಶಿಕಾರಿಪುರ-ರಾಣೆಬೆನ್ನೂರು ರೈಲ್ವೆ ಹಳಿ ನಿರ್ಮಾಣ ಕಾಮಗಾರಿಯ ಭೂಸ್ವಾಧೀನ ಪ್ರಕ್ರಿಯೆ ನಡೆಯುತ್ತಿದ್ದು, ಪ್ರಥಮ ಹಂತದ ಕಾಮಗಾರಿಗಳಿಗೆ ಟೆಂಡರ್ ಕರೆಯುವ ಪ್ರಕ್ರಿಯೆ ಹಂತದಲ್ಲಿದೆ.
- ರೈತರನ್ನು ವಿಶ್ವಾಸಕ್ಕೆ ಪಡೆದು ಭೂಸ್ವಾಧೀನ ಪ್ರಕ್ರಿಯೆ ಮತ್ತು ಕಾಮಗಾರಿಗಳ ಅನುಷ್ಠಾನಗೊಳಿಸಲಾಗುತ್ತಿದೆ. ರಾಜ್ಯ ಸರ್ಕಾರ ತನ್ನ ಪಾಲಿನ ಅನುದಾನ ಬಿಡುಗಡೆ ಮಾಡಿದೆ.
- ಮುಂದಿನ ಎರಡು ವರ್ಷಗಳ ಅವಧಿಯಲ್ಲಿ ಜಿಲ್ಲೆಯಲ್ಲಿ ರೈಲ್ವೆ ಕ್ಷೇತ್ರದಲ್ಲಿ ಐತಿಹಾಸಿಕ ಬದಲಾವಣೆ ಕಾಣಬಹುದು
ಕಾಮಗಾರಿ ಹಿನ್ನೆಲೆ ಪರ್ಯಾಯ ಮಾರ್ಗ | ಮಾರ್ಚ್ ಒಂದರಂದು ಎಲ್ಲ ಕಾಮಗಾರಿಗಳನ್ನು ಆರಂಭಿಸಲು ಪೂರ್ವ ಸಿದ್ಧತೆಗಳನ್ನು ಪೂರ್ಣಗೊಳಿಸಬೇಕು. ಎಲ್ಲ ರೈಲ್ವೆ ಸೇತುವೆಗಳ ನಿರ್ಮಾಣ ಕಾರ್ಯವನ್ನು ದಾಖಲೆ ಸಮಯದ ಒಳಗಾಗಿ ಪೂರ್ಣಗೊಳಿಸಲು ಸೂಚಿಸಲಾಗಿದೆ. ಕಾಮಗಾರಿ ಅವಧಿಯಲ್ಲಿ ವಾಹನ ಸಂಚಾರಕ್ಕೆ ಪರ್ಯಾಯ ಮಾರ್ಗಗಳನ್ನು ಗುರುತಿಸಲಾಗುತ್ತಿದೆ. ಸಾರ್ವಜನಿಕರಿಗೆ ಹೆಚ್ಚಿನ ಅನಾನುಕೂಲತೆಗಳು ಆಗದಂತೆ ಸೂಕ್ತ ಪರ್ಯಾಯ ರಸ್ತೆಗಳನ್ನು ಕಲ್ಪಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ.
ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಮಹಾನಗರ ಪಾಲಿಕೆ ಮೇಯರ್ ಸುವರ್ಣಾ ಶಂಕರ್, ಸೂಡಾ ಅಧ್ಯಕ್ಷ ಜ್ಯೋತಿ ಪ್ರಕಾಶ್, ಆಯುಕ್ತ ಚಿದಾನಂದ್ ವಟಾರೆ, ರೈಲ್ವೆ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆÀ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.