ಸುದ್ದಿ ಕಣಜ.ಕಾಂ
ಶಿವಮೊಗ್ಗ: ಕೈಗಾರಿಕಾ ವಲಯದ ಕಾರ್ಮಿಕರಿಗೆ ಮನೆಗಳನ್ನು ಒದಗಿಸಲು ಸರ್ಕಾರ ಬದ್ಧವಾಗಿದ್ದು, ವಿವಿಧ ಯೋಜನೆಗಳನ್ನು ಬಳಸಿಕೊಂಡು ಕಾರ್ಮಿಕರ ವಸತಿ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕಾರ್ಮಿಕರಿಗೆ ಶುಭ ಸುದ್ದಿ ನೀಡಿದ್ದಾರೆ.
ಮಾಚೇನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಬುಧವಾರ ಆಯೋಜಿಸಿದ್ದ ಮಾಚೇನಹಳ್ಳಿ ಕೈಗಾರಿಕ ಸಂಘದ ರಜತ ಮಹೋತ್ಸವ ಕಟ್ಟಡದ ಶಿಲಾನ್ಯಾಸ ನೆರವೇರಿಸಿ ಮಾತನಾಡಿದರು.
ಸರ್ಕಾರದ ನೂತನ ಕೈಗಾರಿಕೆ ನೀತಿಯ ಪ್ರಕಾರ ಹೆಚ್ಚಿನ ಉದ್ಯೋಗಗಳನ್ನು ಸೃಜಿಸುವ ಕೈಗಾರಿಕೆಗಳಿಗೆ ಸರ್ಕಾರ ಹೆಚ್ಚಿನ ಪೆÇ್ರೀತ್ಸಾಹ ನೀಡುತ್ತಿದೆ ಎಂದು ತಿಳಿಸಿದರು.
ಆತ್ಮನಿರ್ಭರ್ ಯೋಜನೆಯಡಿ ಪ್ರಧಾನಮಂತ್ರಿ ಕೌಶಲ ವಿಕಾಸ ಯೋಜನೆ ಕಾರ್ಯಕ್ರಮ ಜಿಲ್ಲೆಯಲ್ಲಿ ಕಾರ್ಯಾರಂಭ ಮಾಡಿದೆ. ಬೀದಿ ಬದಿ ವ್ಯಾಪಾರಿಗಳಿಗೆ ಕಿರು ಸಾಲ ನೀಡುವ ಪಿಎಂ ಸ್ವನಿಧಿ ಯೋಜನೆಯಡಿ ಜಿಲ್ಲೆಯಲ್ಲಿ ಎರಡು ಸಾವಿರಕ್ಕೂ ಹೆಚ್ಚು ಜನರು ಕಿರು ಸಾಲ ಸೌಲಭ್ಯ ಪಡೆದಿದ್ದಾರೆ.
– ಬಿ.ಎಸ್.ಯಡಿಯೂರಪ್ಪ, ಮುಖ್ಯಮಂತ್ರಿ
ಸರ್ಕಾರ ಕೈಗಾರಿಕೆಗಳನ್ನು ಪ್ರಾರಂಭಿಸಲು ಪೂರಕ ವಾತಾವರಣ ನಿರ್ಮಿಸುತ್ತಿದೆ. ರಸ್ತೆ, ನೀರು ಪೂರೈಕೆ, ವಿದ್ಯುತ್ ಮುಂತಾದ ಮೂಲಸೌಲಭ್ಯಗಳನ್ನು ತ್ವರಿತಗತಿಯಲ್ಲಿ ಒದಗಿಸುವ ಮೂಲಕ ಕೈಗಾರಿಕಾ ಕ್ಷೇತ್ರದಲ್ಲಿ ಹೆಚ್ಚಿನ ಬಂಡವಾಳ ಹೂಡಲು ಉತ್ತೇಜನ ನೀಡುತ್ತಿದೆ. ಪ್ರಸ್ತುತ ಕೈಗಾರಿಕಾ ಹೂಡಿಕೆಯಲ್ಲಿ ಕರ್ನಾಟಕ ಪ್ರಥಮ ಸ್ಥಾನದಲ್ಲಿದೆ. 2020ರ ನೂತನ ಕೈಗಾರಿಕಾ ನೀತಿಯ ಪ್ರಕಾರ ಹೆಚ್ಚಿನ ಉದ್ಯೋಗ ಸೃಷ್ಟಿಗೆ ಒತ್ತು ನೀಡುತ್ತಿದೆ ಎಂದರು.
ಮಾಚೇನಹಳ್ಳಿ ಕೊಡುಗೆ ಅಪಾರ | ಶಿವಮೊಗ್ಗ ಜಿಲ್ಲೆ ರಾಜ್ಯದ ಕೈಗಾರಿಕಾ ಬೆಳವಣಿಗೆಯಲ್ಲಿ ಹೆಚ್ಚಿನ ಕೊಡುಗೆ ನೀಡಿದೆ. ಮಾಚೇನಹಳ್ಳಿ ಕೈಗಾರಿಕಾ ಪ್ರದೇಶ 3 ಸಾವಿರ ಮಂದಿಗೆ ನೇರವಾಗಿ ಮತ್ತು 2ಸಾವಿರ ಮಂದಿಗೆ ಪರೋಕ್ಷವಾಗಿ ಉದ್ಯೋಗ ಕಲ್ಪಿಸಿದೆ. ಇಲ್ಲಿ ಪ್ರತಿ ವರ್ಷ 600 ಕೋಟಿ ರೂಪಾಯಿ ವಹಿವಾಟು ನಡೆಸುತ್ತಿದೆ. ಸಂಘವು ಕೌಶಲ್ಯ ಅಭಿವೃದ್ಧಿಗಾಗಿ ಪ್ರತ್ಯೇಕ ಕೇಂದ್ರ ತೆರೆಯಲು ಹಾಗೂ ಮರಳು ಸುಧಾರಣಾ ಘಟಕ ಮತ್ತು ಉಪಯುಕ್ತತೆ ಕೇಂದ್ರವನ್ನು 20 ಕೋಟಿ ರೂ. ವೆಚ್ಚದಲ್ಲಿ ಸ್ಥಾಪಿಸುತ್ತಿರುವುದು ಶ್ಲಾಘನೀಯ ಎಂದರು.
ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ, ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ, ಶಾಸಕ ಬಿ.ಕೆ.ಸಂಗಮೇಶ, ವಿಧಾನ ಪರಿಷತ್ ಸದಸ್ಯರಾದ ರುದ್ರೇಗೌಡ, ಭಾರತಿ ಶೆಟ್ಟಿ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.