ಕ್ರೀಡಾ ಕ್ಷೇತ್ರದಲ್ಲಿ ಅವಕಾಶಗಳ ಹೆಬ್ಬಾಗಿಲಾಗಲಿದೆ ಶಿವಮೊಗ್ಗ, ಹೇಗೆ ಇಲ್ಲಿದೆ ಮಾಹಿತಿ

 

 

ಸುದ್ದಿ ಕಣಜ.ಕಾಂ
ಶಿವಮೊಗ್ಗ: ಜಿಲ್ಲೆಯಲ್ಲಿ ಕೇಂದ್ರ ಸರ್ಕಾರದ ವಿಶೇಷ ಕ್ರೀಡಾ ವಲಯ (ಎಸ್.ಎ.ಜಿ) ಯೋಜನೆಯಡಿ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸಲು ಉದ್ದೇಶಿಸಲಾಗಿದೆ. ಈ ಹಿನ್ನೆಲೆಯಲ್ಲಿ ಸ್ಥಳ ಪರಿಶೀಲನೆ ಹಾಗೂ ವಿವಿಧ ಶಂಕುಸ್ಥಾಪನೆ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಫೆಬ್ರವರಿ 21ರಂದು ಕೇಂದ್ರ ಕ್ರೀಡಾ ಸಚಿವ ಕಿರಣ್ ರಿಜಿಜು ಅವರು ಶಿವಮೊಗ್ಗ ಆಗಮಿಸಲಿದ್ದಾರೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.
ವಿವಿಧ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿರುವ ಶಿವಮೊಗ್ಗ ಫ್ರೀಡ್‍ಂ ಪಾರ್ಕ್‍ಗೆ ಮಂಗಳವಾರ ಭೇಟಿ ನೀಡಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಪ್ರತಿಭೆಗಳಿಗೆ ಅನುಕೂಲ | ವಿಶೇಷ ಕ್ರೀಡಾ ವಲಯ ಯೋಜನೆಯಿಂದ ಕೇವಲ ಜಿಲ್ಲೆ ಮಾತ್ರವಲ್ಲದೆ ನೆರೆಯ ಜಿಲ್ಲೆಗಳ ಕ್ರೀಡಾ ಪ್ರತಿಭೆಗಳನ್ನು ಗುರುತಿಸಿ ವೃತ್ತಿಪರ ತರಬೇತಿ ನೀಡುವುದು ಸಾಧ್ಯವಾಗಲಿದೆ. ಇದೊಂದು ಅತ್ಯುತ್ತಮ ತರಬೇತಿ ಕೇಂದ್ರವಾಗಲಿದ್ದು, ಇಡೀ ರಾಜ್ಯದ ಆಸ್ತಿಯಾಗಲಿದೆ. ಸಚಿವರ ಭೇಟಿಯ ಪೂರ್ವಭಾವಿಯಾಗಿ ಕೇಂದ್ರ ಸರ್ಕಾರದ ಹಿರಿಯ ಅಧಿಕಾರಿಗಳು ಫೆ.18ರಂದು ಜಿಲ್ಲೆಗೆ ಆಗಮಿಸಿ ಸ್ಥಳ ಪರಿಶೀಲನೆ ಮತ್ತು ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ ಎಂದು ಹೇಳಿದರು.
50 ಎಕರೆಯಲ್ಲಿ ಸ್ಥಾಪನೆ | ವಿಶೇಷ ಕ್ರೀಡಾ ವಲಯ ಸ್ಥಾಪನೆಗೆ ಈಗಾಗಲೇ ಕೆಲವು ಸ್ಥಳಗಳನ್ನು ಗುರುತಿಸಲಾಗಿದೆ. ಕೃಷಿ ವಿಶ್ವವಿದ್ಯಾಲಯದ ಕ್ಯಾಂಪಸ್ ನಲ್ಲಿ 50 ಎಕರೆ ಪ್ರದೇಶ, ಲಯನ್ ಸಫಾರಿ ಎದುರು 50 ಎಕರೆ ಪ್ರದೇಶ ಮತ್ತು ಪಶುವೈದ್ಯಕೀಯ ಕಾಲೇಜು ಆವರಣದಲ್ಲಿರುವ 25 ಎಕರೆ ಪ್ರದೇಶವನ್ನು ಗುರುತಿಸಲಾಗಿದೆ. ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದ ಬಳಿಕ ಅಂತಿಮಗೊಳಿಸಲಿದ್ದಾರೆ.
21 ರಂದು ಕ್ರೀಡಾ ಸಚಿವರ ಆಗಮನ | ಫೆಬ್ರವರಿ 21ರಂದು ಕೇಂದ್ರ ಕ್ರೀಡಾ ಸಚಿವರು ಸ್ಮಾರ್ಟ್ ಸಿಟಿ ಯೋಜನೆಯಡಿ ಕೈಗೊಳ್ಳಲಾಗಿರುವ 4 ಕೋಟಿ ರೂ. ಕಾಮಗಾರಿಗಳಿಗೆ ಚಾಲನೆ ಮತ್ತು ಸಹ್ಯಾದ್ರಿ ಕಾಲೇಜಿನಲ್ಲಿ 4 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಒಳಾಂಗಣ ಕ್ರೀಡಾಂಗಣ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸುವರು ಎಂದರು.
ವಿಶ್ವವಿದ್ಯಾಲಯವಾಗಿ ಮೇಲ್ದರ್ಜೆಗೆ | ಜಿಲ್ಲೆಯಲ್ಲಿರುವ ಪಶು ವೈದ್ಯಕೀಯ ಕಾಲೇಜನ್ನು ಪಶು ವೈದ್ಯಕೀಯ ವಿಶ್ವವಿದ್ಯಾಲಯವಾಗಿ ಮೇಲ್ದರ್ಜೆಗೆ ಏರಿಸಲು ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಲಾಗಿದ್ದು, ಮುಂದಿನ ಬಜೆಟ್‍ನಲ್ಲಿ ಈ ಕುರಿತು ಘೋಷಿಸಲು ಕೋರಲಾಗಿದೆ ಎಂದು ತಿಳಿಸಿದರು.

error: Content is protected !!