ವಿಧಾನ ಪರಿಷತ್ ಚುನಾವಣೆ, ಬಿಜೆಪಿ- ಜೆಡಿಎಸ್ ಹೊಂದಾಣಿಕೆ ಬಗ್ಗೆ ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದೇನು?

 

 

ಸುದ್ದಿ ಕಣಜ.ಕಾಂ | KARNATAKA | POLITICAL NEWS
ಶಿವಮೊಗ್ಗ: ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಚುನಾವಣೆಯ ಕುರಿತು ಪ್ರಮುಖ ವಿಚಾರವೊಂದನ್ನು ಮಾಜಿ ಸಿಎಂ ಯಡಿಯೂರಪ್ಪ ಹೇಳಿದರು.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಈ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಹೊಂದಾಣಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಎಲ್ಲಿ ಅವರು ಸ್ಪರ್ಧೆ ಮಾಡಿಲ್ಲ. ಅಲ್ಲಿ ನಮಗೆ ಬೆಂಬಲ ನೀಡಿ ಎಂದು ಕುಮಾರಸ್ವಾಮಿ ಅವರಲ್ಲಿ ಮನವಿ ಮಾಡಿಕೊಂಡಿದ್ದೇನೆ ಎಂದು ತಿಳಿಸಿದರು.
15 ಸ್ಥಾನಗಳಲ್ಲಿ ಬಿಜೆಪಿ ಗೆಲುವು ನಿಶ್ಚಿತ
ವಿಧಾನ ಪರಿಷತ್ 25 ಕ್ಷೇತ್ರಗಳಲ್ಲಿ ಬಿಜೆಪಿ 20 ಸ್ಥಾನಗಳಲ್ಲಿ ಸ್ಪರ್ಧಿಸಲಿದೆ. ಇದರಲ್ಲಿ 15 ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳೇ ಗೆಲುವು ಸಾಧಿಸಲಿದ್ದಾರೆ. ಶಿವಮೊಗ್ಗ ಕ್ಷೇತ್ರದಲ್ಲಿ ಕಣದಲ್ಲಿರುವ ಡಿ.ಎಸ್.ಅರುಣ್ ಗೆಲ್ಲುವುದು ನಿಶ್ಚಿತ ಎಂದು ಹೇಳಿದರು.
ಕೇಂದ್ರ ಮತ್ತು ರಾಜ್ಯ ಸರ್ಕಾರ ಬಡವರ ಪರವಾಗಿದ್ದು, ಸಾಕಷ್ಟು ಯೋಜನೆಗಳನ್ನು ನೀಡಲಾಗಿದೆ. ಹೀಗಾಗಿ, ಚುನಾವಣೆಯಲ್ಲಿ ದೊಡ್ಡ ಅಂತರದಿಂದ ಗೆಲ್ಲುತ್ತೇವೆ‌ ಎಂದರು.
ಪ್ರಧಾನಿ ನರೇಂದ್ರ ಮೋದಿ ಅವರು ಮಾರ್ಚ್ ವರೆಗೆ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಯೋಜನೆ ಅಡಿ ಆಹಾರ ಧಾನ್ಯ ವಿತರಣೆ ನಿರ್ಧಾರ ಕೈಗೊಂಡಿರುವುದು ಸ್ವಾಗತಾರ್ಹ ಎಂದರು.
ಕಾಂಗ್ರೆಸ್ ಸ್ನೇಹಿತರಿಂದ‌ ಬರೀ ಟೀಕೆ
ಕಾಂಗ್ರೆಸ್ ಪಕ್ಷದ ಸ್ನೇಹಿತರು ಬರೀ ಟೀಕೆ ಮಾಡುತಿದ್ದಾರೆ. ಚುನಾವಣೆ ಫಲಿತಾಂಶ ಹೊರಬಿದ್ದಾಗ ವಾಸ್ತವ ಅವರಿಗೇ ಅರಿವು ಆಗಲಿದೆ. ಹೀಗಾಗಿ, ನಾನು ಮಾತನಾಡುವುದಿಲ್ಲ. ಜನರೇ ಅವರಿಗೆ ಬುದ್ಧಿ ಕಲಿಸುತ್ತಾರೆ ಎಂದು ತಿಳಿಸಿದರು.
ಬೆಲೆ ಏರಿಕೆ ಚುನಾವಣೆಯ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದರು.

https://www.suddikanaja.com/2021/11/23/political-activity-begins-in-shivamogga-for-mlc-election-nomination-by-candidates/

error: Content is protected !!