ಇಂದಿನಿಂದ ಎಸ್ಸೆಸ್ಸೆಲ್ಸಿ‌ ಪರೀಕ್ಷೆ ಆರಂಭ, ಶಿವಮೊಗ್ಗದ ಎಷ್ಟು ಕೇಂದ್ರಗಳಲ್ಲಿ ನಡೆಯಲಿದೆ ಪರೀಕ್ಷೆ, ಮಾಡಿಕೊಂಡಿರುವ ಸಿದ್ಧತೆಗಳೇನು

ಸುದ್ದಿ ಕಣಜ.ಕಾಂ | DISTRICT | EDUCATION CORNER
ಶಿವಮೊಗ್ಗ: ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ‌ ಪರೀಕ್ಷೆಯನ್ನು ಮಾರ್ಚ್ 28ರಿಂದ ಏಪ್ರಿಲ್ 11ರ ವೆರೆಗೆ ನಡೆಸಲಿದ್ದು, ಸಕಲ‌ ಸಿದ್ಧತೆಗಳನ್ನು ಮಾಡಲಾಗಿದೆ.
ಜಿಲ್ಲೆಯ ಎಲ್ಲ ತಾಲೂಕುಗಳ ಒಟ್ಟು 94 ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷೆಗಳು ಸುಗಮವಾಗಿ ನಡೆಸಲು ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗಿದೆ. 94 ಪರೀಕ್ಷಾ ಕೇಂದ್ರಗಳಲ್ಲಿ 90 ಕೇಂದ್ರಗಳು ರೆಗ್ಯುಲರ್ ವಿದ್ಯಾರ್ಥಿಗಳಿಗಾಗಿ ಹಾಗೂ 4 ಖಾಸಗಿ ಪರೀಕ್ಷಾ ಕೇಂದ್ರಗಳಾಗಿರಲಿವೆ.

READ | ಮಾ.30, 31ರಂದು ಶಿವಮೊಗ್ಗ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ, ಈ ಸಲದ ಸರ್ವಾಧ್ಯಕ್ಷರು ಯಾರು, ಏನು ವಿಶೇಷ

ಈ ಪರೀಕ್ಷಾ ಕೇಂದ್ರಗಳಿಗೆ ಸಕಾಲದಲ್ಲಿ ಪ್ರಶ್ನೆಪತ್ರಿಕೆಗಳನ್ನು ಸಕಾಲದಲ್ಲಿ ತಲುಪಿಸಿ, ಉಸ್ತುವಾರಿ ನೋಡಿಕೊಳ್ಳಲು, ಪರೀಕ್ಷೆಗಳು ಸುಗಮವಾಗಿ ನಡೆಯಲು 35 ಜನ ಮಾರ್ಗಾಧಿಕಾರಿಗಳು, 94 ಜನ ಸ್ಥಾನಿಕ ಜಾಗೃತ ದಳದ ಅಧಿಕಾರಿಗಳು ಹಾಗೂ 94 ಜನ ಮೊಬೈಲ್ ಸ್ವಾಧೀನಾಧಿಕಾರಿಗಳನ್ನು ನೇಮಿಸಲಾಗಿದೆ. ಅಲ್ಲದೆ ಪೊಲೀಸ್ ಭದ್ರತೆಯೂ ಇರಲಿದೆ.
ಕಟ್ಟುನಿಟ್ಟಿನ ಕೋವಿಡ್ ಮಾರ್ಗಸೂಚಿ ಅನ್ವಯ ಪರೀಕ್ಷೆ
ಕೋವಿಡ್ ಸೋಂಕಿನ ಹಿನ್ನೆಲೆಯಲ್ಲಿ ಪರೀಕ್ಷಾ ಕೇಂದ್ರಗಳಲ್ಲಿ ಸಾಮಾಜಿಕ ಅಂತರ, ಮಾಸ್ಕ್, ಸ್ಯಾನಿಟೈಜರ್, ಥರ್ಮಲ್ ಸ್ಕ್ಯಾನ್ ಮಾಡುವಂತೆ ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿ ನೇಮಕ ಮಾಡಲಾಗಿದೆ.
ಪರೀಕ್ಷಾ ಕೇಂದ್ರದ ಸುತ್ತ ಪ್ರವೇಶ ನಿರ್ಬಂಧ
ಪರೀಕ್ಷೆ ನಡೆಯುವ ದಿನಗಳಂದು ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ಪ್ರದೇಶದ ವ್ಯಾಪ್ತಿಯಲ್ಲಿ ಸಾರ್ವಜನಿಕರು ಸಂಚರಿಸುವುದು, ಗುಂಪುಗೂಡುವುದನ್ನು ನಿರ್ಬಂಧಿಸಿ ನಿಷೇದಾಜ್ಞೆ ಜಾರಿಗೊಳಿಸಲಾಗಿದೆ. ಪರೀಕ್ಷಾರ್ಥಿಗಳು ಹಾಗೂ ಪರೀಕ್ಷೆಗೆ ನಿಯೋಜಿತರಾದ ಅಧಿಕಾರಿ, ಸಿಬ್ಬಂದಿ ಹೊರತುಪಡಿಸಿ ಇತರೆ ವ್ಯಕ್ತಿಗಳು ಕೇಂದ್ರ ಪ್ರವೇಶಿಸುವುದನ್ನು ನಿರ್ಬಂಧಿಸಲಾಗಿದೆ.