ಶಿವಮೊಗ್ಗ ಜಿಲ್ಲೆಯಲ್ಲಿ ‘ಹುಂಚ’ ತಂಬಾಕು ಮುಕ್ತ ಗ್ರಾಮ ಘೋಷಣೆ

ಸುದ್ದಿ ಕಣಜ.ಕಾಂ | DISTRICT | HEALTH NEWS
ಶಿವಮೊಗ್ಗ: ಹೊಸನಗರ ತಾಲೂಕಿನ ಹುಂಚ ಗ್ರಾಮವನ್ನು ತಂಬಾಕು ಮುಕ್ತ ಗ್ರಾಮ(tobacco free village)ವನ್ನಾಗಿ ಘೋಷಣೆ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಹೇಳಿದರು.
ಬುಧವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಸಮನ್ವಯ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಹುಂಚ ಮಾದರಿಯಲ್ಲೇ ಜಿಲ್ಲೆಯಲ್ಲಿ ಇನ್ನಷ್ಟು ಗ್ರಾಮಗಳನ್ನು ತಂಬಾಕು ಮುಕ್ತ ಮಾಡಲು ಕ್ರಮ ವಹಿಸಬೇಕು ಎಂದು ಸೂಚಿಸಿದರು.

READ | ನುಡಿತೇರಿಗೆ ಚಾಲನೆ, ಶಿವಮೊಗ್ಗ ಸಾಹಿತ್ಯ ಸಮ್ಮೇಳನದ ವಿಶೇಷತೆಗಳು ಇಲ್ಲಿವೆ

ಒಂದು ವರ್ಷದಲ್ಲಿ ₹64,460 ದಂಡ ಸಂಗ್ರಹ
ಕಳೆದ ಒಂದು ವರ್ಷದ ಅವಧಿಯಲ್ಲಿ ಜಿಲ್ಲೆಯಲ್ಲಿ ಕೋಟ್ಪಾ ಕಾಯ್ದೆ ಉಲ್ಲಂಘನೆಯ 582 ಪ್ರಕರಣಗಳಲ್ಲಿ ₹64,460 ದಂಡ ಸಂಗ್ರಹಿಸಲಾಗಿದೆ. ಶಿವಮೊಗ್ಗ ಮತ್ತು ಭದ್ರಾವತಿ ಹೊರತುಪಡಿಸಿ ಬೇರೆ ತಾಲೂಕುಗಳಲ್ಲಿ ಕಡಿಮೆ ಸಂಖ್ಯೆಯಲ್ಲಿ ಪ್ರಕರಣಗಳು ದಾಖಲಾಗಿದ್ದು, ದಾಳಿಗಳನ್ನು ಹೆಚ್ಚಿಸಬೇಕು. ತಾಲೂಕು ಮಟ್ಟದ ಸಮಿತಿಗಳು ಸಕ್ರಿಯವಾಗಿ ಕಾರ್ಯ ನಿರ್ವಹಿಸಬೇಕು. ಆರೋಗ್ಯ ಇಲಾಖೆ ಮತ್ತು ಪೊಲೀಸ್ ಇಲಾಖೆ ಮಾತ್ರವಲ್ಲದೆ ನಗರ ಸ್ಥಳೀಯ ಸಂಸ್ಥೆಗಳು ಈ ಕಾರ್ಯವನ್ನು ಕೈಗೆತ್ತಿಕೊಳ್ಳಬೇಕು ಎಂದು ಹೇಳಿದರು.
ಕೌನ್ಸಿಲಿಂಗ್ ವ್ಯವಸ್ಥೆ ಮಾಡಿ
ತಂಬಾಕು ವ್ಯಸನ ಮುಕ್ತ ಕೇಂದ್ರ ಪ್ರಸ್ತುತ ಮೆಗ್ಗಾನ್ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಕಳೆದ ಸಾಲಿನಲ್ಲಿ ಕೇವಲ 3,908 ಮಂದಿ ಇದರ ಪ್ರಯೋಜನ ಪಡೆದುಕೊಂಡಿದ್ದಾರೆ. ಮನೋ ಚೈತನ್ಯ ಕಾರ್ಯಕ್ರಮದಡಿಯಲ್ಲಿ ಎಲ್ಲ ತಾಲೂಕುಗಳಲ್ಲಿ ಸಹ ತಂಬಾಕು ವ್ಯಸನ ಮುಕ್ತ ಕೌನ್ಸಿಲಿಂಗ್ ವ್ಯವಸ್ಥೆ ಮಾಡಬೇಕು. ತಂಬಾಕು ಚಟದಿಂದ ಮುಕ್ತರಾದರೆ ಬೇರೆ ವ್ಯಸನಗಳಿಗೆ ಬಲಿಯಾಗುವ ಸಾಧ್ಯತೆ ಕಡಿಮೆ ಎಂದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಶ್ ಸುರಗಿಹಳ್ಳಿ, ಆರ್‌.ಸಿಎಚ್ ಅಧಿಕಾರಿ ಡಾ. ನಾಗರಾಜ್ ನಾಯಕ್ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

READ | ಭಾರತೀಪುರ ಕ್ರಾಸ್ ತಪ್ಪಿಸಲು ಅತ್ಯಾಧುನಿಕ ಮೇಲ್ಸೇತುವೆ ನಿರ್ಮಾಣಕ್ಕೆ ಗ್ರೀನ್ ಸಿಗ್ನಲ್, ಯಾವ ಕಾಮಗಾರಿಗೆಷ್ಟು ಅನುದಾನ