ಸುದ್ದಿ ಕಣಜ.ಕಾಂ | KARNATAKA | POLITICAL NEWS
ಶಿವಮೊಗ್ಗ: ಕರ್ನಾಟಕದಲ್ಲಿ ‘ಬುಲ್ಡೋಜರ್’ ಅಲ್ಲ, ಕಾನೂನು ರೀತಿ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸ್ಪಷ್ಟವಾಗಿ ಹೇಳಿದರು.
ಮಂಗಳವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ನಾವು ಕಾನೂನು ಅನ್ವಯವೇ ಕ್ರಮ ಕೈಗೊಳ್ಳುತ್ತೇವೆ. ಯಾವ ಸ್ಥಳದಲ್ಲಿ ಪರಿಸ್ಥಿತಿ ಏನಿರುತ್ತದೋ ಅದಕ್ಕೆ ಅನುಗುಣವಾಗಿ ಸರ್ಕಾರ ಕ್ರಮ ಕೈಗೊಳ್ಳುತ್ತದೆ. ಇದರ ಜೊತೆಗೆ ನ್ಯಾಯಾಲಯದ ಆದೇಶಗಳನ್ನು ಕೂಡ ಪರಿಪಾಲಿಸಬೇಕು ಎಂದು ತಿಳಿಸಿದರು.
ಪಂಚಮಸಾಲಿ ಸಮುದಾಯದ ಮೀಸಲಾತಿ ವಿಚಾರ ಹಿಂದುಳಿದ ವರ್ಗಗಳ ಆಯೋಗದ ಮುಂದಿದೆ. ಅವರು ಸರಿಯಾದ ನಿರ್ಧಾರ ತೆಗೆದುಕೊಳ್ಳುತ್ತಾರೆ.
– ಬಸವರಾಜ್ ಬೊಮ್ಮಾಯಿ, ಮುಖ್ಯಮಂತ್ರಿ
ಏನಿದು ‘ಬುಲ್ಡೋಜರ್’?
ಉತ್ತರ ಪ್ರದೇಶ ಮತ್ತು ಮಧ್ಯಪ್ರದೇಶದಲ್ಲಿ ಈಗಾಗಲೇ ಕೋಮುಗಲಭೆ, ದುಷ್ಕೃತ್ಯಗಳಲ್ಲಿ ಭಾಗವಹಿಸಿದವರ ಮನೆಗಳ ದಾಖಲಾತಿಗಳನ್ನು ಪರಿಶೀಲಿಸಿ ದಾಖಲೆಗಳು ಸರಿಯಾಗಿ ಇಲ್ಲದಿದ್ದರೆ ಅಂತಹ ಮನೆಗಳನ್ನು ಬುಲ್ಡೋಜರ್ ಬಳಸಿ ಧ್ವಂಸಗೊಳಿಸಲಾಗುತ್ತಿದೆ. ಇದು ಉತ್ತರ ಪ್ರದೇಶದಲ್ಲಿ ಆರಂಭಗೊಂಡು ಈಗ ಮಧ್ಯಪ್ರದೇಶಕ್ಕೂ ವ್ಯಾಪಿಸಿದೆ. ಹೀಗಾಗಿ, ಪ್ರಸ್ತುತ ಕರ್ನಾಟಕದಲ್ಲೂ ರಾಜ್ಯ ಸಂಪುಟ ಸಭೆಯ ಸದಸ್ಯರೂ ಇದೇ ರೀತಿಯ ಬುಲ್ಡೋಜರ್ ನೀತಿ ರಾಜ್ಯದಲ್ಲೂ ಜಾರಿಗೆ ತರಬೇಕು ಎಂಬ ಮಾತುಗಳು ಕೇಳಿಬರುತ್ತಿವೆ. ಅದರ ನಡುವೆ ಬೊಮ್ಮಾಯಿ ಕರ್ನಾಟಕದಲ್ಲಿ ಇಂತಹ ಕ್ರಮವನ್ನು ಜಾರಿಗೆ ತರುವುದಿಲ್ಲ ಎಂದು ಪರೋಕ್ಷವಾಗಿ ತಿಳಿಸಿದರು.
READ | ಬೆಂಕಿಪೊಟ್ಟಣ ಕೇಳಿಕೊಂಡ ಬಂದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ವ್ಯಕ್ತಿಗೆ ಕಠಿಣ ಶಿಕ್ಷೆ
ಘಟನೆಯಲ್ಲಿ ಭಾಗಿಯಾದವರ ವಿರುದ್ಧ ಖಡಕ್ ಕ್ರಮ
ಹುಬ್ಬಳ್ಳಿ ಗಲಾಟೆ ಸಂಬಂಧ ಪ್ರತಿಕ್ರಿಯೆ ನೀಡಿದ ಬೊಮ್ಮಾಯಿ, ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಸೂಕ್ತ ಕ್ರಮಕೈಗೊಳ್ಳಲಾಗಿದೆ. ಘಟನೆಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಈ ಹಿಂದೆ ಡಿಜೆ ಹಳ್ಳಿಯಲ್ಲಿ ಆದ ಗಲಾಟೆಗೆ ಸಂಬಂಧಿಸಿದಂತೆ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಾಗಿತ್ತು. ಈ ಪ್ರಕರಣವನ್ನು ಸಹ ಗಂಭೀರವಾಗಿ ಪರಿಗಣಿಸಲಾಗಿದೆ ಎಂದರು.