ಶಿವಮೊಗ್ಗ ವಿಮಾನ ನಿಲ್ದಾಣ ನಾಮಕರಣ ಬಗ್ಗೆ ಮುಖ್ಯಮಂತ್ರಿ ಬೊಮ್ಮಾಯಿಗೆ ಪತ್ರ ಬರೆದ ಬಿ.ಎಸ್.ಯಡಿಯೂರಪ್ಪ, ಪತ್ರದಲ್ಲೇನಿದೆ?

 

 

ಸುದ್ದಿ ಕಣಜ.ಕಾಂ | KARNATAKA | SHIVAMOGGA AIRPORT
ಶಿವಮೊಗ್ಗ: ನಿರ್ಮಾಣ ಹಂತದಲ್ಲಿರುವ ‘ಶಿವಮೊಗ್ಗ ವಿಮಾನ ನಿಲ್ದಾಣ’ಕ್ಕೆ ಹೆಸರಿಡುವ ವಿಚಾರ ಇಷ್ಟಕ್ಕೆ ಮುಗಿಯುವ ಲಕ್ಷಣಗಳು ಕಾಣುತ್ತಿಲ್ಲ.
ಕಾಮಗಾರಿ ಪುನರಾರಂಭವಾದಾಗಿನಿಂದಲೂ ನಾನಾ ಹೆಸರುಗಳು ಕೇಳಿಬರುತ್ತಲೇ ಇವೆ. ಈ ನಡುವೆ ಇತ್ತೀಚೆಗೆ ನಗರಕ್ಕೆ ಆಗಮಿಸಿದ್ದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಅಧಿಕೃತವಾಗಿ ವಿಮಾನ ನಿಲ್ದಾಣಕ್ಕೆ ಬಿ.ಎಸ್.ಯಡಿಯೂರಪ್ಪ ಅವರ ಹೆಸರು ಘೋಷಣೆ ಮಾಡಿದ್ದೇ ಭಾರಿ ಚರ್ಚೆಗಳು ನಡೆಯುತ್ತಿವೆ. ಅದರಲ್ಲೂ ಸೋಶಿಯಲ್ ಮೀಡಿಯಾದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

shimoga airport
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬರೆದಿರುವ ಪತ್ರ.

ಸಿಎಂಗೆ ಪತ್ರ ಬರೆದು ಬಿ.ಎಸ್.ವೈ
ಭಾನುವಾರ ಮುಖ್ಯಮಂತ್ರಿ ಬಸವಾಜ್ ಬೊಮ್ಮಾಯಿ ಅವರಿಗೆ ಪತ್ರ ಬರೆದಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ‘ತಮ್ಮ ಹೆಸರು ಸೂಕ್ತವಲ್ಲವೆಂದು’ ನಿಲುವು ವ್ಯಕ್ತಪಡಿಸಿದ್ದಾರೆ.
ಯಡಿಯೂರಪ್ಪ ಬರೆದಿರುವ ಪತ್ರದಲ್ಲಿ ಏನಿದೆ?
1) ಶಿವಮೊಗ್ಗದ ಈ ಹೊಸ ವಿಮಾನ ನಿಲ್ದಾಣಕ್ಕೆ ನನ್ನ ಹೆಸರನ್ನಿಡುವುದಾಗಿ ತಾವು ಘೋಷಿಸುತ್ತೀರಿ. ತಮ್ಮ ಈ ವಿಶೇಷವಾದ ಪ್ರೀತಿ, ಅಭಿಮಾನಕ್ಕೆ ಧನ್ಯವಾದಗಳು. ಇದಕ್ಕಾಗಿ ಜಿಲ್ಲೆಯ ಎಲ್ಲ ಶಾಸಕರು, ವಿಧಾನ ಪರಿಷತ್ ಸದಸ್ಯರು, ಸಂಘ ಸಂಸ್ಥೆಗಳು ಹಾಗೂ ಎಲ್ಲ ಮುಖಂಡರುಗಳಿಗೆ ನನ್ನ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ.
2) ರಾಷ್ಟ್ರದ ಅಭಿವೃದ್ಧಿಗೆ ಸೇವೆ ಸಲ್ಲಿಸಿದ ಅನೇಕ ಮಹನೀಯರ ಹಾಗೂ ದೇಶಭಕ್ತರಿದ್ದಾರೆ. ಅವರು ನೀಡಿರುವ ಕೊಡುಗೆಗೆ ಹೋಲಿಸಿದಾಗ ನನ್ನದೊಂದು ಅಳಿಲು ಸೇವೆ ಮಾತ್ರ. ನನ್ನನ್ನು ಸತತವಾಗಿ ಬೆಂಬಲಿಸಿ ಸಲುಹಿದ ಜಿಲ್ಲೆಯ ಜನತೆಗೆ ಸೇವೆ ಮಾಡಿದ್ದೇನೆಂಬ ಧನ್ಯತಾಭಾವ ನನ್ನದು. ಈ ಹಿನ್ನೆಲೆಯಲ್ಲಿ ನೂತನ ವಿಮಾನ ನಿಲ್ದಾಣಕ್ಕೆ ನನ್ನ ಹೆಸರು ಸೂಕ್ತವಲ್ಲವೆಂದು ಭಾವಿಸುತ್ತೇನೆ.
3) ಆದುದರಿಂದ, ತಮ್ಮ ಈ ನಿರ್ಧಾರವನ್ನು ಪುನರ್ ಪರಿಶೀಲಿಸಿ, ಸೂಕ್ತ ವೇದಿಕೆಯಲ್ಲಿ ಚರ್ಚಿಸಿ, ರಾಷ್ಟ್ರದ, ನಾಡಿನ ಅಭಿವೃದ್ಧಿಗೆ ಹಾಗೂ ಇತಿಹಾಸಕ್ಕೆ ಕೊಡುಗೆ ನೀಡಿದಂತಹ ಮಹನೀಯರ ಹೆಸರನ್ನು ಈ ಹೊಸ ವಿಮಾನ ನಿಲ್ದಾಣಕ್ಕೆ ನಾಮಕರಣ ಮಾಡಬೇಕೆಂದು ಕೋರುತ್ತೇನೆ. ಎಂದು ಪತ್ರದಲ್ಲಿ ತಿಳಿಸಿದ್ದಾರೆ.

error: Content is protected !!