ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ರಾಜ್ಯಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವವನ್ನು ಮುಂಬರುವ ಜನವರಿ 6, 7 ಮತ್ತು 8 ರಂದು ನಗರದ ಕುವೆಂಪು ರಂಗಮಂದಿರದಲ್ಲಿ ನಡೆಸಲು ಉದ್ದೇಶಿಸಲಾಗಿದ್ದು, ಆಯೋಜಿತ ಕಾರ್ಯಕ್ರಮವು ಯಶಸ್ವಿಯಾಗಿ ನಡೆಸಲು ಜಿಲ್ಲಾಡಳಿತವು ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಹೇಳಿದರು.
READ | 9 ಕೋಳಿಮರಿಗಳನ್ನು ನುಂಗಿದ ನಾಗರ ಹಾವು
ತಮ್ಮ ಕಚೇರಿ ಸಭಾಂಗಣದಲ್ಲಿ ಬುಧವಾರ ಏರ್ಪಡಿಸಲಾಗಿದ್ದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಶಿಕ್ಷಣ ಕ್ಷೇತ್ರದಲ್ಲಿ ಕಲೆಗಳನ್ನು ಉತ್ತೇಜಿಸುವ ಮೂಲಕ ಶಾಲಾ ವಿದ್ಯಾರ್ಥಿಗಳ ಕಲಾತ್ಮಕ ಪ್ರತಿಭೆಯನ್ನು ಸೃಜನಾತ್ಮಕ ಕೌಶಲ್ಯಗಳನ್ನು ಹೊರತರಲು ಉತ್ತಮ ವೇದಿಕೆ ಇದಾಗಿರಲಿದ್ದು, ಶಾಲಾ ಹಂತದಲ್ಲಿ ಹೆಚ್ಚು ಮಕ್ಕಳು ಪಾಲ್ಗೊಳ್ಳುವಂತೆ ಪ್ರೋತ್ಸಾಹಿಸಬೇಕಾದ ಅಗತ್ಯವಿದೆ ಎಂದರು.
ವೈಯಕ್ತಿಕ ವಿಭಾಗದಲ್ಲಿ ಹಾಗೂ ಸಾಮೂಹಿಕ ವೇದಿಕೆಗಳಲ್ಲಿ ಸ್ಪರ್ಧೆಗಳನ್ನು ನಡೆಸಲು ಉದ್ದೇಶಿಸಲಾಗಿದೆ. ಅದಕ್ಕಾಗಿ ಡಿವಿಎಸ್ ಶಾಲಾ ಕಟ್ಟಡದಲ್ಲಿ ಅಗತ್ಯ ವ್ಯವಸ್ಥೆ ಕಲ್ಪಿಸಿಕೊಳ್ಳುವಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕರಿಗೆ ಸೂಚಿಸಿರುವುದಾಗಿ ಅವರು ತಿಳಿಸಿದರು.
34 ಶೈಕ್ಷಣಿಕ ಜಿಲ್ಲೆಗಳಿಂದ 1,800 ಮಕ್ಕಳು ಭಾಗಿ
ರಾಜ್ಯದ 34 ಶೈಕ್ಷಣಿಕ ಜಿಲ್ಲೆಗಳಲ್ಲಿ ನಡೆಸಲಾದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವದಲ್ಲಿ ಸ್ಥಾನ ಪಡೆದ 1800ಕ್ಕೂ ಹೆಚ್ಚಿನ ಪ್ರತಿಭಾವಂತ ವಿದ್ಯಾರ್ಥಿಗಳು ವೈಯಕ್ತಿಕ ವಿಭಾಗದಲ್ಲಿ(ಎಂಟರಿಂದ ಹತ್ತನೆಯವರೆಗೆ) ಹಾಗೂ ಸಾಮೂಹಿಕ ವಿಭಾಗದಲ್ಲಿ (ಎಂಟರಿಂದ ಹನ್ನೆರಡನೇವರೆಗೆ) ಭಾಗವಹಿಸಲಿದ್ದಾರೆ. ಇವರೊಂದಿಗೆ 300ಕ್ಕೂ ಹೆಚ್ಚಿನ ತೀರ್ಪುಗಾರರು, 200ಕ್ಕೂ ಹೆಚ್ಚಿನ ಸ್ವಯಂ ಸೇವಕರನ್ನು ನಿಯೋಜಿಸಲಾಗುವುದು. ಅದರ ಯಶಸ್ಸಿಗಾಗಿ ಹಾಗೂ ವ್ಯವಸ್ಥಿತ ನಿರ್ವಹಣೆಗಾಗಿ ಸ್ಥಳೀಯ ಶಿಕ್ಷಣ ಸಂಸ್ಥೆಗಳ ಸಹಯೋಗ ಪಡೆದುಕೊಳ್ಳಲಾಗುವುದು ಎಂದರು.
ವಿವಿಧ ಸಮಿತಿಗಳ ನೇಮಕ
ಸ್ಪರ್ಧೆಗಳಲ್ಲಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನ ಪಡೆದು ವಿಜೇತರಾದ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ ಹಾಗೂ ಸ್ಮರಣಿಕೆ ನೀಡಿ ಗೌರವಿಸಲಾಗುವುದು. ಕ್ರೀಡಾಪಟುಗಳಿಗೆ ಉತ್ತಮ ಊಟ ಹಾಗೂ ವಸತಿ ವ್ಯವಸ್ಥೆ ಕಲ್ಪಿಸಲು ಕ್ರಮ ಕೈಗೊಳ್ಳಲಾಗುವುದು. ಈ ಕ್ರೀಡಾಕೂಟದ ಯಶಸ್ವಿಗೆ ಸ್ವಾಗತ ಸಮಿತಿ, ಆಹಾರ ಸಮಿತಿ, ಕ್ರಿಯಾ ಸಮಿತಿ, ಸುರಕ್ಷತೆ ಮತ್ತು ರಕ್ಷಣಾ ಸಮಿತಿ, ಶಿಸ್ತುಪಾಲನಾ ಸಮಿತಿ ಸೇರಿದಂತೆ ಹಲವು ಸಮಿತಿಗಳನ್ನು ರಚಿಸಲಾಗಿದ್ದು, ಅದರ ಉಸ್ತುವಾರಿಗಾಗಿ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳನ್ನು ನಿಯೋಜಿಸಲಾಗುವುದು ಎಂದರು.
READ | ಕಾಂಗ್ರೆಸಿಗೆ ಸಂಸದ ಬಿ.ವೈ.ರಾಘವೇಂದ್ರ ಸವಾಲ್
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಂ.ಡಿ.ಪ್ರಕಾಶ್, ಮಹಾನಗರ ಪಾಲಿಕೆ ಆಯುಕ್ತ ಮಾಯಣ್ಣಗೌಡ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕ ಸಿ.ಆರ್.ಪರಮೇಶ್ವರಪ್ಪ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಶ್ ಸುರಗೀಹಳ್ಳಿ, ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಕೃಷ್ಣಪ್ಪ, ನೌಕರರ ಸಂಘದ ವಿಭಾಗೀಯ ಉಪಾಧ್ಯಕ್ಷ ಆರ್.ಮೋಹನ್ ಕುಮಾರ್, ಪ್ರೌಢ ಶಾಲಾ ಸಹ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಬಿ.ಸಿದ್ಧಬಸಪ್ಪ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಮಲ್ಲಿಕಾರ್ಜುನ್, ಲೋಕೇಶ್ವರಪ್ಪ, ನಾಗರಾಜ್ ಮತ್ತು ಉಮಾಶಂಕರ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
Today arecanut rate | 30/11/2022 ರ ಅಡಿಕೆ ಧಾರಣೆ, ಯಾವ ಮಾರುಕಟ್ಟೆಯಲ್ಲಿ ಎಷ್ಟು ಬೆಲೆ ಇದೆ?