Independence day | ಸ್ವಾತಂತ್ರ್ಯ ದಿನಾಚರಣೆಯಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ‌ ಪ್ರಮುಖ 10 ಸಂದೇಶಗಳಿವು

Madhu bangarappa

 

 

ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ನಗರದ ಡಿಎಆರ್ ಮೈದಾನದಲ್ಲಿ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು. ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಎಸ್.ಬಂಗಾರಪ್ಪ ಧ್ವಜಾರೋಹಣ ನೆರವೇರಿಸಿದರು.

READ | ಶಿವಮೊಗ್ಗದಲ್ಲಿನ ಸ್ವಾತಂತ್ರ್ಯ ಸಂಗ್ರಾಮದ ಬಗ್ಗೆ ನಿಮಗೆಷ್ಟು‌ ಗೊತ್ತು? ಶಿವಮೊಗ್ಗದ ಪ್ರಥಮ ಸ್ವಾತಂತ್ರ್ಯ ಸೇನಾನಿ ಯಾರು? ಎಷ್ಟು ಜನ ಗಲ್ಲಿಗೇರಿದ್ದರು?

ಮಧು ಎಸ್.ಬಂಗಾರಪ್ಪರ ಪ್ರಮುಖ 10 ವಿಚಾರಗಳು

  1. ಜಿಲ್ಲೆಯ ಅನೇಕರು ಸ್ವಾತಂತ್ರ್ಯ ಹೋರಾಟದಲ್ಲಿ ಸಕ್ರಿಯರಾಗಿದ್ದರು. ವಿಶೇಷವಾಗಿ ಬ್ರಿಟೀಷರ ವಿರುದ್ಧ ಹೋರಾಡಿದ ಈಸೂರಿನ ಸ್ವಾತಂತ್ರ್ಯ ಹೋರಾಟಗಾರರ ನೆನಪು ಜನರ ಮನಸ್ಸಿನಲ್ಲಿ ಅಚ್ಚಳಿಯದೇ ಉಳಿದಿದೆ. ಸ್ವಾತಂತ್ರ್ಯ ಸಂಗ್ರಾಮದಲ್ಲಿ ಈಸೂರಿನ ಐವರು ಹೋರಾಟಗಾರರು ನೇಣಿಗೆ ಕೊರಳೊಡ್ಡಿ ಹುತಾತ್ಮರಾಗಿದ್ದು ನಿಜಕ್ಕೂ ನೋವಿನ ಸಂಗತಿ. ಆ ಎಲ್ಲ ಹೋರಾಟಗಾರರಿಗೆ ನಮನ ಸಲ್ಲಿಸುವೆ.
  2. ಮುಂಗಾರು ಮಳೆ ವಿಳಂಬವಾದರೂ ಜಿಲ್ಲೆಯಲ್ಲಿ ಬಿದ್ದಿರುವ ಮಳೆಯ ಪ್ರಮಾಣ ಪೂರ್ಣ ಅಲ್ಲದಿದ್ದರೂ ಸ್ವಲ್ಪ ಮಟ್ಟಿಗೆ ಸಮಾಧಾನ ತಂದಿದೆ. ಈಗಾಗಲೇ ಬಿದ್ದಿರುವ ಮಳೆಯಿಂದಾಗಿ ಆಗಿರುವ ಜನ- ಜಾನುವಾರುಗಳ ಜೀವಹಾನಿ, ಬೆಳೆಹಾನಿಗಳ ಮಾಹಿತಿ ಸಂಗ್ರಹಿಸಿ, ಸಂತ್ರಸ್ತರಿಗೆ ಕೂಡಲೆ ಪರಿಹಾರಧನ ಬಿಡುಗಡೆಗೊಳಿಸುವಂತೆ ಸೂಚನೆ ನೀಡಲಾಗಿದೆ.
  3. ಶಿಕ್ಷಣ ಸಚಿವನಾಗಿ ಅಧಿಕಾರ ವಹಿಸಿಕೊಂಡ ನಂತರ ಶಿಕ್ಷಣ ಇಲಾಖೆಯ ಸಮಸ್ಯೆಗಳನ್ನು ಇತ್ಯರ್ಥಪಡಿಸುವ ಉದ್ದೇಶ ಹೊಂದಿದ್ದೇನೆ. ಶಾಲೆಗಳ ಆರಂಭದ ದಿನಗಳಲ್ಲಿ ಮಕ್ಕಳ ಶೈಕ್ಷಣಿಕ ಚಟುವಟಿಕೆಗಳಿಗೆ ಯಾವುದೇ ಅಡಚಣೆಯಾಗದಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಮಕ್ಕಳಿಗೆ ಸಮವಸ್ತ್ರ, ಪಠ್ಯಪುಸ್ತಕ, ಶೂಗಳನ್ನು ಪೂರೈಸಲಾಗಿದೆ. ಈ ಹಿಂದೆ 1 ರಿಂದ 8ನೇ ತರಗತಿಯ ವಿದ್ಯಾರ್ಥಿಗಳಿಗೆ ವಾರಕ್ಕೆ 1 ಮೊಟ್ಟೆಯನ್ನು ನೀಡುತ್ತಿದ್ದು, ಈಗ ವಾರಕ್ಕೆ 2 ಮೊಟ್ಟೆ ನೀಡುವುದರರೊಂದಿಗೆ 10ನೇ ತರಗತಿವರೆಗೆ ಈ ಯೋಜನೆಯನ್ನು ವಿಸ್ತರಿಸಲಾಗಿದೆ ಹಾಗೂ ದ್ವಿತೀಯ ಪಿ.ಯು.ಸಿ ವಿದ್ಯಾರ್ಥಿಗಳಿಗೆ 2 ಬಾರಿ ಪೂರಕ ಪರೀಕ್ಷೆಗೆ ಹೊಸದಾಗಿ ಅವಕಾಶ ನೀಡಲಾಗಿದೆ. ಇದರಿಂದ ಉನ್ನತ ಶಿಕ್ಷಣಕ್ಕೆ ಸೇರುವ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ. ಶಿಕ್ಷಕರ ನೇಮಕಾತಿ, ನೂತನ ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಕ್ರಮ ವಹಿಸಲಾಗಿದೆ.
  4. ಜಿಲ್ಲೆಯಲ್ಲಿ ಹಲವು ದಶಕಗಳಿಂದ ಕಗ್ಗಂಟಾಗಿರುವ ಶರಾವತಿ ಮುಳುಗಡೆ ಸಂತ್ರಸ್ತರು ಹಾಗೂ ಬಗರ್‍ ಹುಕುಂ ಸಾಗುವಳಿದಾರರ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಮಾನ್ಯ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ವಿಶೇಷ ಆಸಕ್ತಿ ವಹಿಸಿದ್ದು, ಶೀಘ್ರದಲ್ಲಿ ಸದರಿ ಸಮಸ್ಯೆಗಳ ಪರಿಹಾರಕ್ಕೆ ಅಗತ್ಯ ಕ್ರಮವಹಿಸಲಾಗುವುದು.
  5. ಅರಣ್ಯ ಮತ್ತು ಕಂದಾಯ ಇಲಾಖೆಯ ನಡುವಿನ ಭೂಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಉದ್ದೇಶಿಸಲಾಗಿದೆ. ಜಿಲ್ಲೆಯಲ್ಲಿ ಪ್ರಧಾನ ಹಾಗೂ ವಾಣಿಜ್ಯ ಬೆಳೆ, ಅಡಿಕೆಗೆ ಎಲೆಚುಕ್ಕೆ ರೋಗ, ಕೃಷಿಕರಿಗೆ ಆತಂಕ ತಂದೊಡ್ಡಿದೆ. ಅಲ್ಲದೇ ಮಾರುಕಟ್ಟೆ ಅಸ್ತಿರತೆಯನ್ನು ಹೋಗಲಾಡಿಸುವ ನಿಟ್ಟಿನಲ್ಲಿ ಸರ್ಕಾರವು ರೈತರ ಹಿತರಕ್ಷಣೆಗೆ ಬದ್ಧವಾಗಿದೆ. ಜಿಲ್ಲೆಯಲ್ಲಿ ಭತ್ತದ ಬೆಳೆ ಕಡಿಮೆಯಾಗುತ್ತಿದೆ. ಮುಂದಿನ ದಿನಗಳಲ್ಲಿ ಭತ್ತದ ಬೆಳೆ ಪ್ರೋತ್ಸಾಹಿಸಲು ಚಿಂತನೆ ನಡೆದಿದೆ.
  6. ಜಿಲ್ಲೆಯಲ್ಲಿ ವೃತ್ತಿಪರ ಶಿಕ್ಷಣ ಮತ್ತು ಕೈಗಾರಿಕೆಗಳ ಅಭಿವೃದ್ಧಿಗೆ ಸರ್ಕಾರ ಸೂಕ್ತ ನಿರ್ಧಾರ ಕೈಗೊಳ್ಳಲಿದೆ. ಅಂತೆಯೇ ಜಿಲ್ಲೆಯ ಜನರ ಬಹುದಿನಗಳ ಬೇಡಿಕೆಯಂತೆ ನಗರದ ಪ್ರಮುಖ ಸ್ಥಳದಲ್ಲಿ ಜಿಲ್ಲಾಡಳಿತ ಭವನ ನಿರ್ಮಾಣ ಹಾಗೂ ಪ್ರಸ್ತಾಪಿಸಲಾಗಿರುವ ಆಯುಷ್ ವಿಶ್ವವಿದ್ಯಾಲಯ ಆರಂಭಿಸಲು ವಿಶೇಷ ಗಮನ ಹರಿಸಲಾಗುವುದು.
  7. ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿರುವ ಗ್ರಂಥಾಲಯಗಳನ್ನು ಮೇಲ್ದರ್ಜೆಗೇರಿಸಿ, ಅತ್ಯಾಧುನಿಕ ಹಾಗೂ ಸುಸಜ್ಜಿತ ಇ-ಲೈಬ್ರರಿಗಳನ್ನಾಗಿ ಪರಿವರ್ತಿಸುವ ಕಾರ್ಯ ಪ್ರಗತಿಯಲ್ಲಿದೆ. ಇದರಿಂದಾಗಿ ಗ್ರಾಮೀಣ ಜನರ ಬೌದ್ಧಿಕ ವಿಕಾಸಗೊಳಿಸಲು ಹಾಗೂ ಸಮಾಜದ ಮುಖ್ಯವಾಹಿನಿಗೆ ಕರೆತರಲು ಸರ್ಕಾರ ಮಹತ್ವದ ಹೆಜ್ಜೆ ಇರಿಸಿದೆ.
  8. ಸರ್ಕಾರವು ಸರ್ವರನ್ನು ಒಳಗೊಂಡ ಆರ್ಥಿಕ ಮತ್ತು ಸಾಮಾಜಿಕ ಪ್ರಗತಿಪರ ಅಭಿವೃದ್ಧಿಯನ್ನೇ ಧ್ಯೇಯವಾಗಿಟ್ಟುಕೊಂಡಿದೆ. ಈ ನಿಟ್ಟಿನಲ್ಲಿ ಮತ್ತೊಂದು ಮಹತ್ವದ ಹೆಜ್ಜೆ ಇರಿಸಿದೆ. ಪ್ರತಿ ಮನೆಯಲ್ಲಿ ಬೆಳಕು ಸೂಸುವ ಗೃಹಜ್ಯೋತಿ ಯೋಜನೆಯಡಿ ತಿಂಗಳಿಗೆ 200 ಯುನಿಟ್ ವರೆಗಿನ ಉಚಿತ ವಿದ್ಯುತ್ ಸೌಲಭ್ಯ ಪಡೆಯಲು ರಾಜ್ಯದಲ್ಲಿ 1.45 ಕೋಟಿಗೂ ಅಧಿಕ ಕುಟುಂಬಗಳು ಹೆಸರು ನೋಂದಾಯಿಸಿದ್ದಾರೆ.
  9. ಗೃಹಲಕ್ಷ್ಮಿ ಯೋಜನೆ (gruhalakshmi scheme)ಯಡಿ ಸೌಲಭ್ಯ ಪಡೆಯಲು ರಾಜ್ಯದ ಅಸಂಖ್ಯಾತ ಮಹಿಳೆಯರು ಆನ್‍ಲೈನ್ ಮೂಲಕ ಹೆಸರು ನೋಂದಾಯಿಸಿಕೊಂಡಿದ್ದಾರೆ. ಈ ಯೋಜನೆಯಡಿ ಪ್ರತಿ ಕುಟುಂಬದ ಯಜಮಾನಿಗೆ ಮಾಸಿಕವಾಗಿ ₹2,000 ಆರ್ಥಿಕ ನೆರವು ನೀಡಲಾಗುವುದು. ಸುಮಾರು 1.28 ಕೋಟಿ ಮಹಿಳೆಯರು ಈ ಯೋಜನೆಯ ಲಾಭ ಪಡೆಯಲಿದ್ದಾರೆ.
  10. ಸಂವಿಧಾನದ ಮಹತ್ವ ಅರಿಯಲು ಅದರ ಆಶಯವನ್ನು ಪ್ರತಿದಿನ ಶಾಲೆಗಳಲ್ಲಿ ಪ್ರಾರ್ಥನೆಯ ಸಮಯದಲ್ಲಿ ಮಕ್ಕಳಿಂದ ಓದಿಸುವಂತೆ ಕ್ರಮ ಕೈಗೊಳ್ಳಲಾಗುತ್ತಿದೆ.

ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ, ಜಿಲ್ಲಾ ಪಂಚಾಯಿತಿ ಸಿಇಓ ಸ್ನೇಹಲ್‌ ಲೋಖಂಡೆ, ಜಿಲ್ಲಾ ಪೊಲೀಸ್ ಅಧೀಕ್ಷಕ ಜಿ.ಕೆ.ಮಿಥುನ್ ಕುಮಾರ್ ಸೇರಿದಂತೆ ಇತರರು‌ ಉಪಸ್ಥಿತರಿದ್ದರು.

Forest amendment bill | ಅರಣ್ಯಕ್ಕೆ ಅಪಾಯ ತರಲಿದೆ ‘ಅರಣ್ಯ ಕಾಯ್ದೆ ತಿದ್ದುಪಡಿ ಮಸೂದೆ’, ಆಕ್ಷೇಪಣೆ ಸಲ್ಲಿಕೆಗೇನು ಕಾರಣ?

error: Content is protected !!