Shivamogga Tourism | ಶಿವಮೊಗ್ಗದಲ್ಲಿ ಕೈಗಾರಿಕೆ, ಪ್ರವಾಸೋದ್ಯಮ ಉತ್ತೇಜನಕ್ಕೆ ಮಾಸ್ಟರ್ ಪ್ಲ್ಯಾನ್

Tourism and indutry

 

 

ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಜಿಲ್ಲೆಯಲ್ಲಿ ಕೈಗಾರಿಕೆ ಮತ್ತು ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಲು ಹಲವು ಯೋಜನೆಗಳನ್ನು ರೂಪಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು.
ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಗಣರಾಜ್ಯೋತ್ಸವ ಸಂದೇಶ ನೀಡಿದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.
ಜಿಲ್ಲೆಯಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಪ್ರವಾಸೋದ್ಯಮದಲ್ಲಿ ಅಭಿವೃದ್ಧಿ ಕಾಣದಿರುವುದು ಬೇಸರವೆನಿಸಿದೆ. ಜೋಗ, ಗುಡವಿ, ಸಕ್ರೆಬೈಲು, ಸಿಂಹಧಾಮ ಸೇರಿದಂತೆ ಅನೇಕ ಪ್ರೇಕ್ಷಣೀಯ ಮತ್ತು ಐತಿಹಾಸಿಕ ಸ್ಥಳಗಳನ್ನು ಅಭಿವೃದ್ಧಿಪಡಿಸುವುದರ ಜೊತೆಗೆ ವೈದ್ಯಕೀಯ ಪ್ರವಾಸೋದ್ಯಮ, ಕೈಗಾರಿಕಾ ಪ್ರವಾಸೋದ್ಯಮ ಮತ್ತಿತರ ಕ್ಷೇತ್ರಗಳಲ್ಲಿ ದೊರೆಯಬಹುದಾದ ಅವಕಾಶಗಳನ್ನು ಗುರುತಿಸಿ ಅಭಿವೃದ್ಧಿಗೊಳಿಸಲು ಚಿಂತನೆ ನಡೆಸಲಾಗಿದೆ. ಈ ಬಗ್ಗೆ ಅಧಿಕಾರಿಗಳೊಂದಿಗೆ 3-4 ಸಭೆಗಳನ್ನು ಆಯೋಜಿಸಿ ಚರ್ಚಿಸಲಾಗಿದೆ.

one click many news logo

READ | ರಾಜಕೀಯ ವಲಯದಲ್ಲಿ ಶ್ಯಾಮನೂರು ಶಿವಶಂಕರಪ್ಪರ ಹೇಳಿಕೆ ಸಂಚಲನ, ರಾಘವೇಂದ್ರರನ್ನು ಗೆಲ್ಲಿಸುವಂತೆ ಬಹಿರಂಗ ಮನವಿ

ಮಲೆನಾಡಿನಲ್ಲಿರುವ ಅವಕಾಶಗಳು

  • ಶಿವಮೊಗ್ಗ ಜಿಲ್ಲೆಯಲ್ಲಿ ಬೃಹತ್ ಕೈಗಾರಿಕೆಗಳನ್ನು ಆರಂಭಿಸಲು ಉತ್ಸುಕರಾಗಿರುವ ಉದ್ಯಮಿಗಳನ್ನು ಆಹ್ವಾನಿಸಲು ಉದ್ದೇಶಿಸಲಾಗಿದೆ. ಈ ಸಂಬಂಧ ಈಗಾಗಲೇ ಕೈಗಾರಿಕಾ ಇಲಾಖಾ ಸಚಿವರೊಂದಿಗೆ ಸಮಾಲೋಚನೆ ನಡೆಸಲಾಗಿದೆ.
  • ಸ್ಥಳೀಯವಾಗಿರುವ ಜನಪದ ಹಾಗೂ ಪಾರಂಪರಿಕ ವೈದ್ಯಕೀಯ ವ್ಯವಸ್ಥೆಯನ್ನು ಪರಿಚಯಿಸುವುದರ ಜೊತೆಗೆ ಮಲೆನಾಡಿನ ತಾಣಗಳಲ್ಲಿ ನೈಸರ್ಗಿಕ ಚಿಕಿತ್ಸಾ ವಿಧಾನಗಳ ಮೂಲಕ ಪ್ರವಾಸೋದ್ಯಮ ಮತ್ತಿತರ ಕ್ಷೇತ್ರಗಳಲ್ಲಿನ ಸಾಧ್ಯತೆಗಳನ್ನು ಪರಿಶೀಲಿಸಲಾಗುವುದು. ಅದಕ್ಕಾಗಿ ಏಕಗವಾಕ್ಷಿ ವ್ಯವಸ್ಥೆ ಜಾರಿಗೊಳಿಸುವ ಬಗ್ಗೆಯೂ ಚಿಂತನೆ ನಡೆಸಲಾಗುವುದು.
  • ಜಿಲ್ಲೆಯಲ್ಲಿ ಪ್ರವಾಸೋದ್ಯಮ ಆಭಿವೃದ್ಧಿ ವಿಫುಲ ಅವಕಾಶಗಳಿದ್ದು, ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗುವುದು.
Madhu Bangarappa
ಮಧು ಬಂಗಾರಪ್ಪ

ಶಿಕ್ಷಣ ಕ್ಷೇತ್ರದಲ್ಲಿ ಅನೇಕ ಮಹತ್ವದ ಬದಲಾವಣೆಗಳನ್ನು ತರಲು ಉದ್ದೇಶಿಸಲಾಗಿದೆ. ಕೆಲವು ಮಾರ್ಪಾಡುಗಳೊಂದಿಗೆ ಈಗಾಗಲೇ ಪಠ್ಯಪುಸ್ತಕಗಳ ಮುದ್ರಣ ಕಾರ್ಯ ಮುಂದುವರೆದಿದೆ. ಮಕ್ಕಳ ಪುಸ್ತಕದ ಹೊರೆಯನ್ನು ಕಡಿಮೆ ಮಾಡುವ ಬಗ್ಗೆ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ. ಮುಂದಿನ ಶೈಕ್ಷಣಿಕ ಸಾಲಿನ ಆರಂಭದಲ್ಲಿಯೇ ಬಟ್ಟೆ, ಶೂ, ಪಠ್ಯಪುಸ್ತಕ, ಮತ್ತಿತರ ಮಕ್ಕಳ ಅಗತ್ಯದ ವಸ್ತುಗಳನ್ನು ಸರಬರಾಜು ಮಾಡಲಾಗುವುದು.
– ಮಧು ಬಂಗಾರಪ್ಪ, ಜಿಲ್ಲಾ ಉಸ್ತುವಾರಿ ಸಚಿವ

ನಗರದ ಖಾಸಗಿ ಬಸ್‍ನಿಲ್ದಾಣ, ರೈಲ್ವೇ ಸ್ಟೇಷನ್ ಮತ್ತಿತರ ಜನನಿಬಿಡ ಸ್ಥಳಗಳಲ್ಲಿ ಪ್ರೀಪೇಯ್ಡ್ ಆಟೋ ಸ್ಟ್ಯಾಂಡ್‍ಗಳನ್ನು ಸೃಜಿಸಲಾಗುವುದು.
– ಡಾ.ಆರ್.ಸೆಲ್ವಮಣಿ, ಜಿಲ್ಲಾಧಿಕಾರಿ

ಸ್ಮಾರ್ಟ್ ಸಿಟಿ ಯೋಜನೆಗಳಲ್ಲಿ ನ್ಯೂನ್ಯತೆ
ವಿಮಾನ ನಿಲ್ದಾಣ ಮತ್ತು ಸ್ಮಾರ್ಟ್‍ಸಿಟಿ ಯೋಜನೆಗಳಲ್ಲಿ ಅನೇಕ ನ್ಯೂನತೆಗಳಿರುವುದನ್ನು ತಾವು ಗಂಭೀರವಾಗಿ ಪರಿಗಣಿಸಿದ್ದು, ಅವುಗಳ ತನಿಖೆಗೆ ಸೂಚಿಸಲಾಗಿದೆ. ಈ ಬಗ್ಗೆ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಲಾಗಿದೆ. ತುಮಕೂರು-ಹೊನ್ನಾವರ ರಾಷ್ಟ್ರೀಯ ಹೆದ್ದಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಲು ಗುತ್ತಿಗೆದಾರರಿಗೆ ಸೂಚಿಸಲಾಗಿದೆ ಎಂದರು.
ಜಿಲ್ಲೆಗೆ ಸಂಪರ್ಕ ವ್ಯವಸ್ಥೆ ಇನ್ನಷ್ಟು ಜನರನ್ನು ತಲುಪಿಸಲು, ಸಕಾಲದಲ್ಲಿ ಜನರು ನಿರೀಕ್ಷಿಸಿದ ಸ್ಥಳಗಳಿಗೆ ತಲುಪಲು ರೈಲುಗಳ ಸಂಖ್ಯೆಯನ್ನು ಹೆಚ್ಚಿಸಲು ಹಾಗೂ ಸಂಚಾರ ವ್ಯವಸ್ಥೆಯನ್ನು ಸುಗಮಗೊಳಿಸಲು ಉದ್ದೇಶಿಸಿದ್ದು, ಈಗಾಗಲೇ ಸಂಬಂಧಿಸಿದ ಇಲಾಖಾ ಉನ್ನತ ಮಟ್ಟದ ಅಧಿಕಾರಿಗಳೊಂದಿಗೆ ಚರ್ಚಿಸಲಾಗಿದೆ ಎಂದು ತಿಳಿಸಿದರು.
ಸೊರಬ- ಆನವಟ್ಟಿ- ಶಿರಾಳಕೊಪ್ಪ ನೀರು
ಜಿಲ್ಲೆಯಲ್ಲಿ ಬಗರ್‍ಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರ, ಶರಾವತಿ ಸಂತ್ರಸ್ಥರ ಸಮಸ್ಯೆಗಳ ಶಾಶ್ವತ ಪರಿಹಾರಕ್ಕೆ ಕ್ರಮ ಕೈಗೊಳ್ಳಲಾಗುವುದು. ಬಹುಗ್ರಾಮ ಯೋಜನೆಯಡಿ ಸೊರಬ-ಆನವಟ್ಟಿ-ಶಿರಾಳಕೊಪ್ಪ-ಕುಂಸಿ ಮತ್ತಿತರ ಸ್ಥಳಗಳಿಗೆ ಶುದ್ಧ ಕುಡಿಯುವ ನೀರಿನ ಪೂರೈಕೆಗಾಗಿ ಕಾಮಗಾರಿಗಳನ್ನು ಆರಂಭಿಸಲಾಗಿದ್ದು, ತ್ವರಿತವಾಗಿ ಪೂರ್ಣಗೊಳಿಸಲು ಸೂಚಿಸಲಾಗಿದೆ ಎಂದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸ್ನೇಹಲ್ ಸುಧಾಕರ್ ಲೋಖಂಡೆ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಜಿ.ಕೆ.ಮಿಥುನ್‍ಕುಮಾರ್ ಉಪಸ್ಥಿತರಿದ್ದರು.

error: Content is protected !!