ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ನಗರದ ಅಲ್ಲಮಪ್ರಭು ಮೈದಾನ (freedom park)ಕ್ಕೆ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಬುಧವಾರ ಬೆಳಗ್ಗೆ ಭೇಟಿ ನೀಡಿದರು.
ಸರ್ಕಾರದ ಮಹತ್ವಕಾಂಕ್ಷಿ ಐದು ಗ್ಯಾರಂಟಿ ಯೋಜನೆ (Guarantee scheme) ಫಲಾನುಭವಿಗಳ ಜಿಲ್ಲಾ ಮಟ್ಟದ ಸಮಾವೇಶವನ್ನು ಫೆ.24ರಂದು ನಗರದ (ಅಲ್ಲಮಪ್ರಭು ಮೈದಾನ) ಫ್ರೀಡಂ ಪಾರ್ಕ್ನಲ್ಲಿ ಆಯೋಜಿಸಲಾಗಿದೆ ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಎಸ್ ಬಂಗಾರಪ್ಪರವರು ತಿಳಿಸಿದರು.
READ | ಎಸ್ಸೆಸ್ಸೆಲ್ಸಿ, ಪಿಯುಸಿ ಪರೀಕ್ಷೆ ವೇಳಾಪಟ್ಟಿ ಪ್ರಕಟ, ಯಾವ ದಿನ ಯಾವ ಪರೀಕ್ಷೆ ನಡೆಯಲಿದೆ?
ಕಾರ್ಯಕ್ರಮದ ಪೂರ್ವ ಸಿದ್ಧತೆಗಳನ್ನು ಪರಿಶೀಲಿಸಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜಿಲ್ಲೆಯಿಂದ ಸರ್ಕಾರದ ಗ್ಯಾರಂಟಿ ಸೌಲಭ್ಯ ಪಡೆದ ಎಲ್ಲಾ ಫಲಾನುಭವಿಗಳು ಆಗಮಿಸಲಿದ್ದಾರೆ ಎಂದರು.
ಫೆ.24ರಂದು ಜಿಲ್ಲಾಡಳಿತದಿಂದ ಆಯೋಜಿಸಲಾಗಿರುವ ಜಿಲ್ಲಾ ಮಟ್ಟದ ಗ್ಯಾರಂಟಿ ಫಲಾನುಭವಿಗಳ ಸಮಾವೇಶಕ್ಕೆ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. ಕಾರ್ಯಕ್ರಮದ ಯಶಸ್ವಿ ಅನುಷ್ಠಾನ ಹಾಗೂ ಉಸ್ತುವಾರಿಗಾಗಿ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳ ತಂಡವನ್ನು ನಿಯೋಜಿಸಲಾಗಿದೆ. ವೇದಿಕೆಯ ಮುಂಭಾಗದಲ್ಲಿ ಫಲ-ಪುಷ್ಟ ಹಾಗೂ ಸಿರಿಧಾನ್ಯಗಳಿಂದ ಅಲಂಕರಿಸಲಾಗುವುದು. ಕಾರ್ಯಕ್ರಮಕ್ಕೆ ಬರುವ ಫಲಾನುಭವಿಗಳಿಗಾಗಿ ಅವಶ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ.
– ಗುರುದತ್ತ ಹೆಗಡೆ, ಜಿಲ್ಲಾಧಿಕಾರಿ, ಶಿವಮೊಗ್ಗ
50 ಸಾವಿರ ಜನ ಭಾಗಿ
ಸುಮಾರು 50 ಸಾವಿರಕ್ಕೂ ಹೆಚ್ಚಿನ ಜನ ಜಿಲ್ಲೆಯ ಎಲ್ಲಾ ತಾಲೂಕುಗಳಿಂದ ಆಗಮಿಸುವ ನಿರೀಕ್ಷೆಯಿದ್ದು, ಅವರ ಅನುಕೂಲಕ್ಕಾಗಿ ಎಲ್ಲ ರೀತಿಯ ಮೂಲಭೂತ ಸೌಕರ್ಯಗಳು, ಶೌಚಾಲಯ, ಕುಡಿಯುವ ನೀರು, ಮಧ್ಯಾಹ್ನದ ಉಪಹಾರ ಮತ್ತಿತರ ಎಲ್ಲ ರೀತಿಯ ಸೌಲಭ್ಯಗಳನ್ನು ಒದಗಿಸಲು ಆಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದವರು ನುಡಿದರು.
ಜಿಲ್ಲಾ ಮಟ್ಟದಲ್ಲಿ ಆಯೋಜನೆಗೊಳ್ಳುತ್ತಿರುವ ಈ ಕಾರ್ಯಕ್ರಮಕ್ಕೆ ರಾಜ್ಯದ ಉಪಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಅವರು ಆಗಮಿಸಿ, ಫಲಾನುಭವಿಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಅಲ್ಲದೆ ಸಚಿವ ಸಂಪುಟದ ಕೆಲ ಸಚಿವರು ಹಾಗೂ ನಿಗಮ ಮಂಡಳಿಗಳ ಅಧ್ಯಕ್ಷರುಗಳು ಆಗಮಿಸಲಿದ್ದಾರೆ ಎಂದು ತಿಳಿಸಿದರು.
ಹೊಸ ಬಸ್ ಲೋಕಾರ್ಪಣೆ
ಜಿಲ್ಲಾಡಳಿತದಿಂದ ಆಯೋಜನೆಗೊಂಡಿರುವ ಈ ಕಾರ್ಯಕ್ರಮಕ್ಕೆ ಗಣ್ಯರನ್ನು ಅತಿಥಿಗಳನ್ನು ಆಹ್ವಾನಿಸಲಾಗುವುದು ಇದೇ ಸಂದರ್ಭದಲ್ಲಿ ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಸೌಲಭ್ಯಗಳನ್ನು ವಿತರಿಸಲಾಗುವುದು. ಸಾರ್ವಜನಿಕರ ಸಂಚಾರಕ್ಕೆ ಅನುಕೂಲವಾಗುವಂತೆ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ ಹೊಸ ಬಸ್ಗಳನ್ನು ಲೋಕಾರ್ಪಣೆಗೊಳಿಸಲಾಗುವುದು. ಪ್ರಸ್ತುತ ಜಿಲ್ಲೆಯ ಜನರ ಪ್ರಯಾಣಕ್ಕೆ ಅನುಕೂಲವಾಗುವಂತೆ ನೂರು ಬಸ್ಗಳನ್ನು ಒದಗಿಸುವಂತೆ ಸರ್ಕಾರಕ್ಕೆ ಬೇಡಿಕೆ ಸಲ್ಲಿಸಲಾಗಿದ್ದು, ಹಂತಹಂತವಾಗಿ ಬಸ್ಸುಗಳನ್ನು ಸಂಚಾರಕ್ಕೆ ಮುಕ್ತಗೊಳಿಸಲಾಗುವುದು ಎಂದರು.
ನೋಂದಣಿಯೂ ಲಭ್ಯ
ಈವರೆಗೆ ಗ್ಯಾರಂಟಿ ಯೋಜನೆಗಳ ಸೌಲಭ್ಯ ಪಡೆಯದಿರುವ ವಂಚಿತರ ಅನುಕೂಲಕ್ಕಾಗಿ ವೇದಿಕೆಯ ಇಕ್ಕೆಲಗಳಲ್ಲಿ ದೂರು ಸ್ವೀಕಾರ ಹಾಗೂ ಸಮಸ್ಯೆ ನಿವಾರಣೆಗೆ ಸಲಹಾ ಕೊಠಡಿಗಳನ್ನು ಸ್ಥಾಪಿಸಲಾಗುವುದು. ಅರ್ಹರು ಈ ಸದವಕಾಶದ ಲಾಭ ಪಡೆದುಕೊಳ್ಳಬೇಕೆಂದು ಅವರು ತಿಳಿಸಿದರು.
ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸ್ನೇಹಲ್ ಸುಧಾಕರ್ ಲೋಖಂಡೆ ಜಿಲ್ಲಾ ಪೊಲೀಸ್ ಅಧಿಕಾರಿ ಜಿ.ಕೆ ಮಿಥುನ್ ಕುಮಾರ್ ಅಪರ ಜಿಲ್ಲಾಧಿಕಾರಿ ಸಿದ್ದಲಿಂಗ ರೆಡ್ಡಿ ಸೇರಿದಂತೆ ಜಿಲ್ಲೆಯ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು, ರಾಜಕೀಯ ಮುಖಂಡರು ಉಪಸ್ಥಿತರಿದ್ದರು.