ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ರಾಜ್ಯದಲ್ಲಿ ಏಪ್ರಿಲ್ 26 ಮತ್ತು ಮೇ 7ರಂದು ಲೋಕಸಭಾ ಚುನಾವಣೆಗೆ ಮತದಾನ ನಡೆಯಲಿದೆ ಎಂದು ಭಾರತ ಚುನಾವಣಾ ಆಯೋಗ ವೇಳಾಪಟ್ಟಿ ಪ್ರಕಟಿಸಿದೆ.
ಶಿವಮೊಗ್ಗ ಜಿಲ್ಲಾ ಲೋಕಸಭಾ ಕ್ಷೇತ್ರಕ್ಕೆ ಮೇ 7ರಂದು ಚುನಾವಣೆ ನಡೆಯಲಿದ್ದು, ಶನಿವಾರದಿಂದಲೇ ಚುನಾವಣಾ ನೀತಿಸಂಹಿತೆ ಜಾರಿಗೆ ಬಂದಿರುವುದಾಗಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದರು.
ಅವರ ತಮ್ಮ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಿದ್ದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು.
READ | ಲೋಕಸಭೆ ಚುನಾವಣೆ ವೇಳಾಪಟ್ಟಿ ಪ್ರಕಟ, ಕರ್ನಾಟಕದಲ್ಲಿ ಮತದಾನ, ಫಲಿತಾಂಶ ಯಾವಾಗ?
ಚುನಾವಣೆ ವೇಳಾಪಟ್ಟಿ
- ನಾಮಪತ್ರ ಸಲ್ಲಿಕೆ- ಏಪ್ರಿಲ್ 12ರಿಂದ 19ರವರೆಗೆ ಬೆಳಗ್ಗೆ 11ರಿಂದ ಮಧ್ಯಾಹ್ನ 3 ಗಂಟೆಯವರೆಗೆ
- ನಾಮಪತ್ರಗಳ ಪರಿಶೀಲನೆ- ಏಪ್ರಿಲ್ 20
- ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆಯನ್ನು ಹಿಂಪಡೆಯಲು ಕೊನೆಯ ದಿನ- ಏ.22
- ಮತದಾನ ಪ್ರಕ್ರಿಯೆ- ಮೇ 7
- ಮತ ಎಣಿಕೆ ಕಾರ್ಯ- ಮೇ 6
ಮತಗಟ್ಟೆಗಳ ಸಂಖ್ಯೆ
ಬೈಂದೂರು ಸೇರಿದಂತೆ ಶಿವಮೊಗ್ಗ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 2039 ಮತಗಟ್ಟೆಗಳನ್ನು ಸ್ಥಾಪಿಸಲಾಗುತ್ತಿದ್ದು, ಅವುಗಳಲ್ಲಿ 325 ಸೂಕ್ಷ್ಮ ಮತಗಟ್ಟೆಗಳನ್ನು ಗುರುತಿಸಲಾಗಿದೆ. ಅಲ್ಲಿ ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಯ ನಿರ್ವಹಣೆಗಾಗಿ ಅಗತ್ಯ ಸಿಬ್ಬಂಧಿಯನ್ನು ನಿಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹೆಗಡೆ ತಿಳಿಸಿದರು.
ಕೇವಲ ರಾಜಕೀಯ ಪಕ್ಷಗಳ ಮುಖಂಡರು ಮಾತ್ರವಲ್ಲದೇ ಸಾರ್ವಜನಿಕರೂ ಕೂಡ ಚುನಾವಣಾ ಆಯೋಗದ ನೀತಿ-ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ನಿರ್ಲಕ್ಷಿಸಿದಲ್ಲಿ ಅನಿವಾರ್ಯವಾಗಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು.
ಮಹಿಳಾ ಮತದಾರರೇ ಅಧಿಕ
ಜಿಲ್ಲೆಯಲ್ಲಿ ಯುವ ಮತದಾರರು ಅದರಲ್ಲೂ ವಿಶೇಷವಾಗಿ ಮಹಿಳಾ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಪಡಿಸಲು, ಯಾವುದೇ ಆಮಿಷಕ್ಕೆ ಒಳಗಾಗದೇ ಕಡ್ಡಾಯವಾಗಿ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದರು.
ಕ್ಷೇತ್ರ ವ್ಯಾಪ್ತಿಯಲ್ಲಿ ಸಖಿ, ವಿಶೇಷ ಮತಗಟ್ಟೆ
ಪ್ರತಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಮಹಿಳಾ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿರುವ ಮತಗಟ್ಟೆಗಳಲ್ಲಿ 5 ಸಖಿ ಮತಗಟ್ಟೆಗಳನ್ನು, ಯುವ ಮತದಾರರು ಹೆಚ್ಚಿರುವಲ್ಲಿ 1 ವಿಶೇಷ ಮತಗಟ್ಟೆಯನ್ನು ಸ್ಥಾಪಿಸಲಾಗುವುದು ಅಲ್ಲದೇ ಸ್ಥಳೀಯ ವಿಶೇಷತೆಗಳನ್ನು ಒಳಗೊಂಡಂತೆ ಒಂದು ಮತಗಟ್ಟೆಯನ್ನು ತೆರೆಯಲಾವುದು.
ಸಿವಿಜಿಲ್ ಮೂಲಕ ದೂರು ನೀಡಿ
ಕ್ಷೇತ್ರದ ವ್ಯಾಪ್ತಿಯಲ್ಲಿ ಕಂಡುಬರುವ ಯಾವುದೇ ಚುನಾವಣಾ ಅಕ್ರಮ, ಒತ್ತಡ, ಆಮಿಷ ಮುಂತಾದವು ಕಂಡುಬಂದಲ್ಲಿ ಸಾರ್ವಜನಿಕರು ಸಿವಿಜಲ್ ಆ್ಯಪ್ ಮೂಲಕ ದೂರನ್ನು ದಾಖಲಿಸಿದಲ್ಲಿ, ಈ ದೂರನ್ನು ಗಂಭೀರವಾಗಿ ಪರಿಗಣಿಸಿ ಕೆಲವೇ ಗಂಟೆಗಳ ಅವಧಿಯಲ್ಲಿ ಅಕ್ರಮ ಮಾಡುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದ ಅವರು, ಇದರೊಂದಿಗೆ ಮತದಾರರ ಅನುಕೂಲಕ್ಕಾಗಿ ದಿನದ 24ಗಂಟೆಯೂ ‘1950’ ಸಹಾಯವಾಣಿ ಕಾರ್ಯನಿರ್ವಹಿಸಲಿದೆ ಎಂದರು.
ಈ ಚುನಾವಣೆಯ ವ್ಯವಸ್ಥಿತ ನಿರ್ವಹಣೆಗಾಗಿ ಹಲವು ತಂಡಗಳನ್ನು ರಚಿಸಲಾಗಿದ್ದು, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ನಿಯೋಜಿಸಲಾಗಿದೆ ಎಂದು ಮಾಹಿತಿ ನೀಡಿದರು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ಕುಮಾರ್, ಅಪರ ಜಿಲ್ಲಾಧಿಕಾರಿ ಸಿದ್ಧಲಿಂಗರೆಡ್ಡಿ ಸೇರಿದಂತೆ ಜಿಲ್ಲಾ ಚುನಾವಣಾ ಶಾಖೆಯ ಅಧಿಕಾರಿ-ಸಿಬ್ಬಂಧಿಗಳು ಉಪಸ್ಥಿತರಿದ್ದರು.