ಸುದ್ದಿ ಕಣಜ.ಕಾಂ | DISTRICT | KANNADA RAJYOTSAVA
ಶಿವಮೊಗ್ಗ: ಗ್ರಾಮೀಣ ಪ್ರದೇಶದಲ್ಲಿರುವ ಮಹಿಳೆರಿಗೆ ಉದ್ಯೋಗ ನೀಡುವ ಉದ್ದೇಶದಿಂದ ನಾನಾ ಕ್ರಮಗಳನ್ನು ವಹಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.
ನಗರದ ಡಿಎಆರ್ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಸೋಮವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.
ಗ್ರಾಮೀಣ ಪ್ರದೇಶದಲ್ಲಿ ಉದ್ಯೋಗಾವಕಾಶ ಕಲ್ಪಿಸಲು ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಯೋಜನೆ ಅಡಿ ವೃತ್ತಿ ತರಬೇತಿ ನೀಡಲಾಗುತ್ತಿದೆ. ಈಗಾಗಲೇ 30 ಜನ ಸ್ವಸಹಾಯ ಸಂಘದ ಮಹಿಳೆಯರಿಗೆ ವಾಹನ ಚಾಲನಾ ತರಬೇತಿ ನೀಡಿಲಾಗಿದ್ದು, ಕಸ ವಿಲೇವಾರಿ ಘಟಕದ ವಾಹನವನ್ನು ಚಲಾಯಿಸುವ ಉದ್ಯೋಗ ಕಂಡುಕೊಂಡಿದ್ದಾರೆ ಎಂದು ಹೇಳಿದರು.
ಮುಂದಿನ ತಿಂಗಳಲ್ಲಿ ಇನ್ನೂ 185 ಮಹಿಳೆಯರಿಗೆ ತರಬೇತಿ ನೀಡಲಾಗುವುದು. ಸ್ವ ಉದ್ಯೋಗ ಆರಂಭಿಸಲು 151 ಗ್ರಾಮ ಪಂಚಾಯಿತಿ ಒಕ್ಕೂಟಗಳಿಗೆ 16.22 ಕೋಟಿ ರೂ. ಸಮುದಾಯ ಬಂಡವಾಳ ನಿಧಿ ಸಾಲ ನೀಡಲಾಗಿದೆ ಎಂದು ತಿಳಿಸಿದರು.
ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ ಅಡಿ, ಗ್ರಾಮೀಣ ಪ್ರದೇಶದಲ್ಲಿ ಪ್ರತಿಯೊಬ್ಬರಿಗೂ ಉದ್ಯೋಗ ಅವಕಾಶ ನೀಡಲಾಗುತ್ತಿದೆ. ಮನೆ ಮನೆಗೆ ಉದ್ಯೋಗ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಜಿಲ್ಲೆಯಲ್ಲಿ ಈ ವರ್ಷ ಇದುವರೆಗೆ 109 ಕೋಟಿ ರೂ. ಅನುದಾನ ವೆಚ್ಚ ಮಾಡಲಾಗಿದೆ. 28.52 ಲಕ್ಷ ಮಾನವ ದಿನ ಸೃಜಿಸಲಾಗಿದೆ ಎಂದರು.
ಮನೆ ಇಲ್ಲದವರಿಗೆ ಸ್ವಂತ ಮನೆ
ಪ್ರಧಾನಮಂತ್ರಿ ಜೀವನ ಬಿಮಾ ಯೋಜನೆ ಮತ್ತು ಪ್ರಧಾನಮಂತ್ರಿ ಜೀವನ ಜ್ಯೋತಿ ಯೋಜನೆ ಅಡಿ 65,300 ಮಹಿಳೆಯರನ್ನು ನೋಂದಣಿ ಮಾಡಲಾಗಿದೆ. ಅಮೃತ ವಸತಿ ಯೋಜನೆ ಅಡಿ ಗ್ರಾಮೀಣ ಪ್ರದೇಶದಲ್ಲಿ ಸ್ವಂತ ಮನೆ ಇಲ್ಲದವರಿಗೆ ಮನೆ ನೀಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ.
ಜಿಲ್ಲೆಯ ಎಲ್ಲ ಗ್ರಾಮೀಣ ಪ್ರದೇಶದ ಪ್ರತಿ ಮನೆಗೂ ನಳದ ಮೂಲಕ ನೀರು ಸರಬರಾಜು ಮಾಡುವ ಜಲ ಜೀವನ್ ಮಿಷನ್ 2024ರೊಳಗೆ ಪೂರ್ಣಗೊಳ್ಳಲಿದೆ. ಜಿಲ್ಲೆಯಲ್ಲಿ ಇದುವರೆಗೆ 14.10 ಕೋಟಿ ರೂ. ವೆಚ್ಚದಲ್ಲಿ 615 ಒಟ್ಟು ಕಾಮಗಾರಿಗಳ ಪೈಕಿ 181 ಕಾಮಗಾರಿ ಪೂರ್ಣಗೊಳಿಸಲಾಗಿದೆ ಎಂದು ಹೇಳಿದರು.
ಸ್ವಚ್ಛ ಭಾರತ ಯೋಜನೆಯಡಿ ಗ್ರಾಮೀಣ ಪ್ರದೇಶಗಳಲ್ಲಿ 120 ಸ್ವಚ್ಛ ಸಂಕೀರ್ಣಗಳನ್ನು ನಿರ್ಮಿಸಲಾಗಿದ್ದು, 248 ಕಸ ಸಂಗ್ರಹಿಸುವ ವಾಹನಗಳನ್ನು ಒದಗಿಸಲಾಗಿದೆ. 268 ಗ್ರಾಮ ಪಂಚಾಯಿತಿಗಳಲ್ಲಿ ಸ್ವಚ್ಛ ಸಂಕೀರ್ಣ ಘಟಕಗಳು ಕಾರ್ಯಾರಂಭ ಮಾಡಿವೆ ಎಂದರು. ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಂ.ಲಕ್ಷ್ಮೀಪ್ರಸಾದ್, ಮೇಯರ್ ಸುನೀತಾ ಅಣ್ಣಪ್ಪ ಇತರರು ಉಪಸ್ಥಿತರಿದ್ದರು.
ಓದುಗರ ಗಮನಕ್ಕೆ | ಉದ್ಯೋಗ, ಶಿಕ್ಷಣ, ಕೃಷಿ, ಅಪರಾಧ, ರಾಜಕೀಯ ಹೀಗೆ ಹತ್ತು ಹಲವು ಕ್ಷೇತ್ರಗಳ ಸುದ್ದಿಯ ಕಣಜ. ಈ ವೆಬ್ ಸೈಟ್. ‘ಸುದ್ದಿ ಕಣಜ.ಕಾಂ’ನ ಎಲ್ಲ ಸುದ್ದಿಗಳನ್ನು ನಿಮ್ಮ ಮೊಬೈಲ್ ನಲ್ಲಿಯೇ ಮೊದಲು ಪಡೆಯಬೇಕೆ? ಹಾಗಾದರೆ, ನಮ್ಮನ್ನು ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ. ಲಿಂಕ್ ಮೇಲೆ CLICK ಮಾಡಿ.
https://www.suddikanaja.com/2021/11/01/four-people-selected-for-rajyitsava-award-complete-report-awardees/