Nomination | 15 ಅಭ್ಯರ್ಥಿಗಳಿಂದ 26 ನಾಮಪತ್ರ ಸಲ್ಲಿಕೆ, ಸೊರಬದಲ್ಲಿ ಬ್ರದರ್ಸ್ ಹವಾ, ಕಾಗೋಡು ಕಾಲಿಗೆ ಬಿದ್ದ ಬೇಳೂರು, ಉಳಿದೆಡೆ ಹೇಗಿತ್ತು?

Nomination 1

 

 

ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಜಿಲ್ಲೆಯ ವಿವಿಧ ವಿಧಾನಸಭೆ ಕ್ಷೇತ್ರಗಳಲ್ಲಿ 15 ಅಭ್ಯರ್ಥಿಗಳು 26 ನಾಮಪತ್ರಗಳನ್ನು ಸಲ್ಲಿಸಿದ್ದಾರೆ. ಸೋಮವಾರ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆಯನ್ನು ಚುನಾವಣಾಧಿಕಾರಿಗಳಿಗೆ ಸಲ್ಲಿಸಿದರು.
ಯಾರು ನಾಮಪತ್ರ ಸಲ್ಲಿಸಿದರು?
ಸೊರಬದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಧು ಬಂಗಾರಪ್ಪ,ಬಿಜೆಪಿ ಅಭ್ಯರ್ಥಿ ಕುಮಾರ್ ಬಂಗಾರಪ್ಪ, ಶಿಕಾರಿಪುರದಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ.ವಿಜಯೆಂದ್ರ,ಪಕ್ಷೇತರ ಅಭ್ಯರ್ಥಿ ನಾಗರಾಜ್ ಗೌಡ ಹಾಗೂ ಸಾಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬೇಳೂರು ಗೋಪಾಲಕೃಷ್ಣ, ತೀರ್ಥಹಳ್ಳಿಯಲ್ಲಿ ಜೆಡಿಎಸ್ ಅಭ್ಯರ್ಥಿ ಯಡೂರು ರಾಜರಾಮ್ ನಾಮಪತ್ರ ಸಲ್ಲಿಸಿದರು.

READ | ವ್ಯಾಪಾರಸ್ಥರೇ ಹುಷಾರ್, ನಿಯಮ ಮೀರಿದ್ರೆ ಬೀಳುತ್ತೆ ದಂಡ, ಒಂದು ವರ್ಷದಲ್ಲಿ‌ ₹18.30 ಲಕ್ಷ ದಂಡ ಸಂಗ್ರಹ

ಸೊರಬದಲ್ಲಿ ಬ್ರದರ್ಸ್ ಹವಾ
ಸೊರಬ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಧು ಬಂಗಾರಪ್ಪ ಪಟ್ಟಣದ ಪುರದೈವ ಶ್ರೀ ರಂಗನಾಥ ಸ್ವಾಮಿಗೆ ಕುಟುಂಬ ಸಮೇತರಾಗಿ ವಿಶೇಷ ಪೂಜೆ ಸಲ್ಲಿಸಿ ಸಹಸ್ರಾರು ಸಂಖ್ಯೆಯ ಕಾರ್ಯಕರ್ತರು ಹಾಗೂ ಮುಖಂಡರು ಮತ್ತು ಯುವಕರೊಂದಿಗೆ ಬೃಹತ್ ರೋಡ್ ಶೋ ಮೂಲಕ ತಾಲೂಕು ಕಚೇರಿವರೆಗೆ ಮೆರವಣಿಗೆ ಮೂಲಕ ಸಾಗಿ ತಮ್ಮ ನಾಮಪತ್ರ ಸಲ್ಲಿಸಿದರು.
ಸಹೋದರಿಯರಾದ ಗೀತಾ ಶಿವರಾಜ್ ಕುಮಾರ್, ಸುಜಾತಾ ತಿಲಕ್ ಕುಮಾರ್, ಪತ್ನಿ ಅನಿತಾ ಮಧು ಬಂಗಾರಪ್ಪ, ಪುತ್ರ ಸೂರ್ಯ ಮಧು ಬಂಗಾರಪ್ಪ, ಕಾಂಗ್ರೆಸ್ ಪಕ್ಷದ ಮುಖಂಡರಾದ ಗಣಪತಿ, ತಬಲಿ ಬಂಗಾರಪ್ಪ, ರಾಜಶೇಖರ್, ಎಂ.ಡಿ.ಶೇಖರ್.ನಾಗರಾಜ್ ಚಿಕ್ಕಸವಿ, ಶ್ರೀಧರ,ಉಮೇಶ್ ಉಪಸ್ಥಿತರಿದ್ದರು.
ಬಿಜೆಪಿ ಅಭ್ಯರ್ಥಿ ಕುಮಾರ್ ಬಂಗಾರಪ್ಪ ಅವರು ಸುರಭಿ ಪುರದ ಪುರದೈವ ಶ್ರೀ ರಂಗನಾಥ ಸ್ವಾಮಿಗೆ ಪೂಜೆ ಸಲ್ಲಿಸಿ ರೋಡ್ ಶೋ ಮೂಲಕ ಸಾವಿರಾರು ಕಾರ್ಯಕರ್ತರು, ಮುಖಂಡರೊಂದಿಗೆ ತಾಲೂಕು ಕಚೇರಿವರೆಗೆ ಮೆರವಣಿಗೆ ಮೂಲಕ ಸಾಗಿ ನಾಮಪತ್ರ ಸಲ್ಲಿಸಿದರು. ಸಂಸದ ಬಿ.ವೈ.ರಾಘವೇಂದ್ರ, ವಿಧಾನ ಪರಿಷತ್ ಸದಸ್ಯ ಡಿ. ಎಸ್.ಅರುಣ್, ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್, ಮಂಡಲದ ಅಧ್ಯಕ್ಷ ಪ್ರಕಾಶ್ ತಲಕಾಲಕೊಪ್ಪ, ಶಿವಕುಮಾರ್ ಕಡಸೂರು, ಎಂ.ಡಿ.ಉಮೇಶ್, ದೇವೇಂದ್ರಪ್ಪ ಇದ್ದರು.
ಏ.19ರಂದು ಮತ್ತೊಮ್ಮೆ ನಾಮಪತ್ರ
ಶಿಕಾರಿಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ ವಿಜಯೇಂದ್ರ ಅವರು ತಮ್ಮ ನಾಮಪತ್ರ ಸಲ್ಲಿಸಿದರು. ಪತ್ನಿ ಎಂಎಡಿಬಿ ಅಧ್ಯಕ್ಷ ಗುರುಮೂರ್ತಿ ಸೇರಿದಂತೆ ಹಲವರಿದ್ದರು.
ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಏ.19ರಂದು ಬೆಳಗ್ಗೆ 9 ಗಂಟೆಗೆ ಹುಚ್ಚರಾಯಸ್ವಾಮಿ ದೇವಸ್ಥಾನದಿಂದ ಮೆರವಣಿಗೆ ಹೊರಟು ಇನ್ನೊಂದು ಬಾರಿ ನಾಮಪತ್ರ ಸಲ್ಲಿಸಲಿದ್ದೇನೆ. ಬಹಿರಂಗ ಸಭೆ ಕೂಡ ನಡೆಯಲಿದೆ. ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಕೇಂದ್ರ ಸಚಿವ ನಾರಾಯಣಸ್ವಾಮಿ, ಸಂಸದ ಜಾಧವ್. ಪಿ ರಾಜೀವ್, ಶಾಸಕರಾದ ಕೆ.ಎಸ್ ಈಶ್ವರಪ್ಪ, ಎಸ್.ರುದ್ರೇಗೌಡ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

READ | ಶಿವಮೊಗ್ಗ ಜಿಲ್ಲೆಯಾದ್ಯಂತ ಪೊಲೀಸರ ಭಾರೀ‌ ದಾಳಿ, 11 ಮರಳು, 2 ಜಲ್ಲಿ ತುಂಬಿದ ವಾಹನಗಳು ಸೀಜ್

ಬಂಡಾಯ ಅಭ್ಯರ್ಥಿಯಿಂದ ನಾಮಪತ್ರ ಸಲ್ಲಿಕೆ
ಶಿಕಾರಿಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ವಂಚಿತ ಎಸ್.ಪಿ ನಾಗರಾಜಗೌಡ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು.
ಸೋಮವಾರ ಬೆಳಗ್ಗೆ ಹುಚ್ಚರಾಯಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಸಾವಿರಾರು ಸಂಖ್ಯೆಯಲ್ಲಿ ಸೇರಿದ್ದ ಅಭಿಮಾನಿಗಳು, ಬೆಂಬಲಿಗರೊಂದಿಗೆ ಪಟ್ಟಣದಲ್ಲಿ ಮೆರವಣಿಗೆ ಮೂಲಕ ತಾಲೂಕು ಕಚೇರಿಗೆ ಆಗಮಿಸಿದ ನಾಗರಾಜಗೌಡ ಅವರು ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಿದರು.
ನಾಗರಾಜ್ ಗೌಡ ಕಾಂಗ್ರೆಸ್‍ನಿಂದ ಟಿಕೆಟ್ ಸಿಗುವ ಭರವಸೆಯಲ್ಲಿದ್ದರು. ಆದರೆ ಕೊನೆ ಕ್ಷಣದಲ್ಲಿ ಕಾಂಗ್ರೆಸ್ ಟಿಕೆಟ್ ಕೈ ತಪ್ಪಿದ್ದರಿಂದ ಬಂಡಾಯವಾಗಿ ಸ್ಪರ್ಧಿಸಿದ್ದಾರೆ. ಈ ಮೂಲಕ ಬಿಜೆಪಿ ಅಭ್ಯರ್ಥಿ ಬಿ.ವೈ ವಿಜಯೇಂದ್ರ ವಿರುದ್ಧ ಸೆಣಸಾಟಕ್ಕೆ ರಣರಂಗ ಸಜ್ಜುಗೊಂಡಂತಾಗಿದೆ.
ಜೆಡಿಎಸ್ ಅಭ್ಯರ್ಥಿ ನಾಮಪತ್ರ
ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಚುನಾವಣೆಗೆ ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ಯಡೂರು ರಾಜರಾಮ ಹೆಗಡೆ ನಾಮಪತ್ರಸಲ್ಲಿದರು. ಜೆಡಿಎಸ್ ತಾಲೂಕು ಅಧ್ಯಕ್ಷ ಕಿರಣ್ ಕುಣಜೆ, ತಾಲೂಕು ಜೆಡಿಎಸ್ ಯುವ ಘಟಕ ಅಧ್ಯಕ್ಷ ತಲಬಿ ರಾಘವೇಂದ್ರ, ಅಭಿಲಾಶ್ ಹೆಗಡೆ ಉಪಸ್ಥಿತರಿದ್ದರು.
ಕಾಗೋಡು ಕಾಲಿಗೆ ಬಿದ್ದು ಬೇಳೂರು ನಾಮಪತ್ರ
ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಬೇಳೂರು ಗೋಪಾಲಕೃಷ್ಣ ಅವರು ಸೋಮವಾರ ನಾಮಪತ್ರ ಸಲ್ಲಿಸಿದರು. ಕಾಗೋಡು ತಿಮ್ಮಪ್ಪ ಅವರ ಕಾಲಿಗೆ ಬಿದ್ದು ನಮಸ್ಕರಿಸಿ ನಾಮಪತ್ರವನ್ನು ಸಲ್ಲಿಸಿದ ಬೇಳೂರು ಕಾಗೋಡು ಕೈ ಹಿಡಿದುಕೊಂಡೇ ಜನರ ಬಳಿ ಬಂದರು.
ಮಾತನಾಡಿದ ಬೇಳೂರು, ಸಾಗರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪ್ರತಿಸ್ಪರ್ಧಿ ಆಮ್ ಆದ್ಮಿ ಪಕ್ಷವೇ ಹೊರತು ಬಿಜೆಪಿ ಅಲ್ಲ ಎಂದರು.
ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಮಾತನಾಡಿದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಆರ್.ಜಯಂತ್, ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಮಲ್ಲಿಕಾರ್ಜುನ ಹಕ್ರೆ, ರತ್ನಾಕರ್ ಕಲಗೋಡು ವಕೀಲ ವಿ.ಶಂಕರ್ ಉಪಸ್ಥಿತರಿದ್ದರು.

Shivamogga voter | ಶಿವಮೊಗ್ಗ ಜಿಲ್ಲೆಯಲ್ಲಿ ಮಹಿಳಾ ಮತದಾರರೇ ಸ್ಟ್ರಾಂಗ್ ಗುರು! ಯಾವ ಕ್ಷೇತ್ರದಲ್ಲಿ ಎಷ್ಟು ಮತದಾರಿದ್ದಾರೆ?

error: Content is protected !!